ತುಮಕೂರು :

      ಅಲ್ಪಸಂಖ್ಯಾತರ ವರ್ಗದವರ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿರುವುದರಿಂದ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಿ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಜಾರ್ಜ್ ಕುರಿಯನ್ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಧಾನಮಂತ್ರಿ 15 ಅಂಶಗಳ ಹಾಗೂ ಪ್ರಧಾನಮಂತ್ರಿ ಜನ ವಿಕಾಸ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

      ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅತಿ ಹೆಚ್ಚು ಅಲ್ಪಸಂಖ್ಯಾತರರು 308 ಜಿಲ್ಲೆಗಳನ್ನು ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯಕ್ರಮದಡಿ ಈಗಾಗಲೇ ಆಯ್ಕೆ ಮಾಡಿದ್ದು, ಈ ಪೈಕಿ ತುಮಕೂರು ಜಿಲ್ಲೆಯು ಒಂದಾಗಿದೆ. ಇನ್ನೂ ಅಲ್ಪಸಂಖ್ಯಾತರರು ಹೆಚ್ಚಿರುವ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 5 ಕಿಲೋ ಮೀಟರ್ ವ್ಯಾಪ್ತಿಗೊಳಪಡುವ ಗ್ರಾಮಗಳ ಕ್ಲಸ್ಟರ್ ಗ್ರಾಮವನ್ನಾಗಿ ರಚಿಸಿ ಅಲ್ಪಸಂಖ್ಯಾತ ವರ್ಗದವರಿಗೆ ಶೌಚಾಲಯ, ಹೆಲ್ತ್ ಸೆಂಟರ್ ಸೇರಿದಂತೆ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಯೋಜನೆಯಡಿ 20091 ಫಲಾನುಭವಿಗಳು ಈ ಸೌಲಭ್ಯವನ್ನು ಪಡೆದಿದ್ದಾರೆ. ಅಲ್ಲದೇ ಅಲ್ಪಸಂಖ್ಯಾತ ಮಹಿಳೆಯರಿಗಾಗಿ ಸಾಲ ನೀಡುವ ಸೌಲಭ್ಯದ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮತ್ತು ಮಹಿಳೆಯರಿಗಾಗಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್,ನಟರಾಜ್ ಸಭೆಗೆ ಮಾಹಿತಿ ನೀಡಿದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಮಾರು 53 ಉರ್ದು ಶಾಲೆಗಳಿದ್ದು, ಅತಿಥಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಅಲ್ಲದೇ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ಜಿಲ್ಲೆಗೆ ಹಾಸ್ಟೆಲ್‍ಗಳ ಅವಶ್ಯಕತೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಉಪಾಧ್ಯಕ್ಷರ ಗಮನಕ್ಕೆ ತಂದರು.

      ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಡೆಸುತ್ತಿರುವ ಶಾಲಾ-ಕಾಲೇಜುಗಳಿಗೆ ಅಗತ್ಯವಿರುವ ಕ್ರೀಡಾಂಗಣ, ಸ್ಮಾರ್ಟ್ ಕ್ಲಾಸ್ ರೂಂ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು. ಅಲ್ಲದೇ ಜಿಲ್ಲೆಗೆ ಅಗತ್ಯವಿರುವ ಹಾಸ್ಟೆಲ್ ಇನ್ನೀತರೆ ಸೌಲಭ್ಯಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಎಂದರಲ್ಲದೇ ಪ್ರಧಾನಮಂತ್ರಿ ಜನವಿಕಾಸ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಇದಕ್ಕಾಗಿ ಅನುದಾನ ಬಿಡುಗಡೆಯಾಗುತ್ತಿದೆ. ಇದರ ಸೌಲಭ್ಯ ಫಲಾನುಭವಗಿಳಿಗೆ ತಲುಪಬೇಕು ಆಯೋಗದ ಉಪಾಧ್ಯಕ್ಷರು ತಿಳಿಸಿದರು.

       ಅಲ್ಪಸಂಖ್ಯಾತರ ಇಲಾಖೆ ಯೋಜನೆಯಡಿ 31,323 ಮೆಟ್ರಿಕ್ ಪೂರ್ವ, 7100 ಮೆಟ್ರಿಕ್ ನಂತರ ಹಾಗೂ ಮೆರಿಟ್ ಆಧಾರದ ಮೇರೆಗೆ 7060 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಅಲ್ಲದೇ ಜಿಲ್ಲೆಯಲ್ಲಿ ಇಬ್ಬರು(2) ವಿದ್ಯಾರ್ಥಿಗಳು ಪಿ.ಹೆಚ್.ಡಿ ಫೆಲೋಶಿಪ್ ಪಡೆಯುತ್ತಿದ್ದಾರೆ ಎಂದು ಅಲ್ಪಸಂಖ್ಯಾತರ ಇಲಾಖೆಯ ಕಲ್ಯಾಣಾಧಿಕಾರಿ ಜಾವೇದ್ ಕರಂಗಿ ಸಭೆಗೆ ಮಾಹಿತಿ ನೀಡಿದರು.

      ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಪಾಲಿಕೆ ಆಯುಕ್ತ ಟಿ.ಭೂಬಾಲನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 8 times, 1 visits today)