ತುಮಕೂರು:

      ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಪದವೀಧರರು ಸೇರಲು ಅಕ್ಟೋಬರ್ 1ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ತಿಳಿಸಿದರು.

       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನ್ಯಾಯಾಲಯ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿಂದು ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಮತ್ತು ಎಲೆಕ್ಟರ್ಸ್ ವೆರಿಫೀಕೇಶನ್ ಪ್ರೋಗ್ರಾಂ ಮತ್ತು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ತಯಾರಿಕೆ ಸಂಬಂಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಭೆಯಲ್ಲಿ ಅವರ ಮಾತನಾಡಿ, ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪದವೀಧರರು ಸಹ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ಹಳೆಯ ಮತದಾರರ ಪಟ್ಟಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಪದವಿ ಮುಗಿಸಿ 3 ವರ್ಷಗಳು ಪೂರೈಸಿರುವವರು ಇದೇ ಅಕ್ಟೋಬರ್ 1ರಿಂದ ನವೆಂಬರ್ 6ರವರೆಗೂ ನಮೂನೆ-18ರಲ್ಲಿ ಅರ್ಹ ಪದವೀಧರರು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರ ಕಚೇರಿ, ತಾಲ್ಲೂಕು ಕಚೇರಿ ಹಾಗೂ ಮಹಾನಗರ ಪಾಲಿಕೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯು ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ಹೊರತುಪಡಿಸಿ) ತುಮಕೂರು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.

       ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23ರಂದು ಕರಡು ಮತದಾರರ ಪಟ್ಟಿಗಳನ್ನು ಪ್ರಚುರಪಡಿಸಲಾಗುವುದು ಹಾಗೂ ನವೆಂಬರ್ 23ರಿಂದ ಡಿಸೆಂಬರ್ 9 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಹಾಗೂ ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಗಳನ್ನು ಪ್ರಚುರಪಡಿಸಲಾಗುವುದು ಆದ್ದರಿಂದ ರಾಜಕೀಯ ಪಕ್ಷಗಳವರು ಅರ್ಹ ಪದವೀಧರ ಮತದಾರರಲ್ಲಿ ಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಸಹಕರಿಸತಕ್ಕದ್ದು ಎಂದು ಅವರು ತಿಳಿಸಿದರು.

      ಸಾರ್ವತ್ರಿಕ ಚುನಾವಣೆಯ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020 ಸಂಬಂಧಿಸಿದಂತೆ ಅಕ್ಟೋಬರ್ 15ರವರೆಗೆ ಮತದಾರರ ಪಟ್ಟಿಯಲ್ಲಿನ ತಮ್ಮ ಮಾಹಿತಿಯನ್ನು ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 15ರಂದು ಕರಡು ಮತದಾರರ ಪಟ್ಟಿಗಳನ್ನು ಪ್ರಚುರಪಡಿಸಲಾಗುವುದು ಹಾಗೂ ಅಕ್ಟೋಬರ್ 15ರಿಂದ ನವೆಂಬರ್ 30ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಹಾಗೂ 2020ರ ಜನವರಿ ತಿಂಗಳಲ್ಲಿ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಚುರಪಡಿಸಲಾಗುವುದು ಎಂದು ಅವರು ತಿಳಿಸಿದರು.

      ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ತುಮಕೂರು ಜಿಲ್ಲಾ ವ್ಯಾಪ್ತಿಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ 2684 ಮತಗಟ್ಟೆಗಳಿಗೆ ಎನ್.ವಿ.ಎಸ್.ಪಿ. ಪೋರ್ಟಲ್ ಮೂಲಕ ಮತಗಟ್ಟೆ ಏಜೆಂಟರನ್ನು ತಪ್ಪದೇ ನೇಮಕ ಮಾಡಬೇಕು. ಹಾಗೂ ಎಲ್ಲಾ ರಾಜಕೀಯ ಪಕ್ಷಗಳವರು ತಮ್ಮ ಬಿಎಲ್‍ಒ ಸ್ವಯಂ ಸೇವಕರು, ಪ್ರತಿನಿಧಿಗಳ ಮೂಲಕ ಸಾರ್ವಜನಿಕರಲ್ಲಿ ಅಗತ್ಯ ಅರಿವು ಮೂಡಿಸಿ, ಈ ಅವಕಾಶವನ್ನು ಉಪಯೋಗಿಸಿಕೊಂಡು, ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಲು, ತಪ್ಪುಗಳಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು, ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಪ್ರಕರಣಗಳಲ್ಲಿ ಹೆಸರುಗಳನ್ನು ಕೈಬಿಡುವ ಬಗ್ಗೆ ನಿಗಧಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಜಿಲ್ಲೆಯಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸಲು ಪ್ರೇರೇಪಿಸಬೇಕು.

(Visited 76 times, 1 visits today)