ತುಮಕೂರು:

      ಅಪಾಯಕಾರಿ ಸಾಂಕ್ರಾಮಿಕ ರೋಗ ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮಾರ್ಚ್ 31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

      ರಾಜ್ಯದ ಬೆಂಗಳೂರು ಹಾಗೂ ಕಲ್ಬುರ್ಗಿಗಳಲ್ಲಿ ಕೊರೋನಾ ವೈರಸ್(ಕೋವಿಡ್-19) ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಬೇಕಾಗಿದೆ. ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳಿದ್ದು, ಹೆಚ್ಚಿನ ಜನಸಂದಣಿ ಸೇರಬಾರದಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಸಹ ಗುಂಪುಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗಬಹುದು ಹಾಗೂ ಪ್ರಾಣಹಾನಿಯಾಗುವ ಸಂಭವವಿದೆ ಎಂಬುದನ್ನು ಮನಗಂಡು ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

      ನಿಷೇಧಾಜ್ಞೆಯನ್ವಯ ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಈ ಆದೇಶವು ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ಹಾಗೂ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದಲ್ಲಿ ಅಂತಹವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

(Visited 35 times, 1 visits today)