ತುಮಕೂರು :

      ತುಮಕೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ನಡೆಯದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ತಿಳಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸರ್ವೋಚ್ಚ ನ್ಯಾಯಾಲಯವು ಕೂಡ ಪ್ರಶಂಸೆ ವ್ಯಕ್ತಪಡಿಸಿದೆ. ತಮಿಳುನಾಡಿನಲ್ಲಿ ಕೈಗೊಂಡಿರುವ ಮಾದರಿಯಂತೆ ಜಿಲ್ಲೆಯಲ್ಲಿ ಅಪಘಾತ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದರು.

      ಜಿಲ್ಲೆಯಲ್ಲಿ ಅಪಘಾತ ನಿಯಂತ್ರಿಸುವುದೇ ನಮ್ಮ ಉದ್ದೇಶ. ಆದ್ದರಿಂದ ರಸ್ತೆ ಸುರಕ್ಷತಾ ಸಮಿತಿಯಲ್ಲಿರುವ ಇಲಾಖೆಗಳು ರಸ್ತೆಯ ಸುರಕ್ಷತೆ ಬಗ್ಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಮುಂದಿನ ಸಭೆಯಲ್ಲಿ ಅನುಪಾಲನಾ ವರದಿ ಸಲ್ಲಿಸುವಂತೆ ಅವರು ಸೂಚಿಸಿದರು.ಮಹಾಲೇಖಪಾಲರು ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಲೆಕ್ಕಪರಿಶೋಧನೆಯನ್ನು ಕೈಗೊಂಡಿದ್ದು, ಕೆಶಿಪ್, ಪಿಡಬ್ಲ್ಯೂಡಿ, ಆರ್‍ಟಿಒ, ಪೊಲೀಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ 32 ಮಾದರಿ ದತ್ತಾಂಶಗಳನ್ನು ಭೌತಿಕವಾಗಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ ಎಂದು ಹಿರಿಯ ಲೆಕ್ಕಾಧಿಕಾರಿ ಶ್ರೀನಾಥ್ ಸಭೆಗೆ ಮಾಹಿತಿ ನೀಡಿದರು.

      ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಲಿಂಕರ್ಸ್, ಟ್ರಾಮಾ ಕೇರ್ ಸೆಂಟರ್‍ಗಳನ್ನು ಪ್ರಾರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಡಿಹೆಚ್‍ಒ ಡಾ|| ಚಂದ್ರಿಕಾ ಅವರು ಶಿರಾ ಹಾಗೂ ತುಮಕೂರು ಸೇರಿದಂತೆ ಪ್ರತಿ ತಾಲೂಕಿನಲ್ಲಿಯೂ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗಿದ್ದು, ಸಿಬ್ಬಂದಿಗಳ ಕೊರತೆಯಿಂದಾಗಿ ಕಾರ್ಯನಿರ್ವಹಿಸುತ್ತಿಲ್ಲ ಮುಂದಿನ ದಿನಗಳಲ್ಲಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

      ರಸ್ತೆ ಅಪಘಾತ ಪ್ರಕರಣಗಳಲ್ಲಿ ಯುವಕರೇ ಹೆಚ್ಚಾಗಿ ಕಂಡು ಬರುತ್ತಾರೆ. ಶಿಕ್ಷಣ ಇಲಾಖೆಯು ಮಕ್ಕಳಿಗೆ ರಸ್ತೆ ಸುರಕ್ಷತಾ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು. ಮೂಲಭೂತ ಸೌಕರ್ಯ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿಯಮ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಹೀಗೆ ಮೂರು ಅಂಶಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

      ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಎಜಿ ಕಛೇರಿಯ ಡೆಪ್ಯೂಟಿ ಲೇಖಪಾಲರಾದ ಮೋನಾಲಿ ಪದಾತರಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

(Visited 7 times, 1 visits today)