ತುಮಕೂರು :

      ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಮಾರ್ಚ್ ಅಂತ್ಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

       ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

       ಇಲಾಖೆವಾರು ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಹಾಗೂ ವೆಚ್ಚವಾಗಿರುವ ಮೊತ್ತದ ಬಗ್ಗೆ ಇಲಾಖೆ ಅಧಿಕಾರಿಗಳಿಂದ ದೃಢೀಕರಣ ಪಡೆಯುವಂತೆ ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

       ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಹೆಚ್ಚುವರಿ ಅನುದಾನ ಬಿಡುಗಡೆಯಾಗುತ್ತಿರುವ ಇಲಾಖೆಗಳಲ್ಲಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಿ ಎಂದರು. ಅಲ್ಲದೇ ಸಮಸ್ಯೆ ಇದ್ದರೆ ಅದನ್ನು ನೇರವಾಗಿ ಗಮನಕ್ಕೆ ತರಬೇಕು ಎಂದರು.

       ಸಭೆಗೆ ಗೈರು ಹಾಜರಾಗಿರುವ ಕಾರ್ಮಿಕ ಇಲಾಖೆ ಹಾಗೂ ಸಹಕಾರ ಇಲಾಖೆ ಸೇರಿದಂತೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರೇಮ್‍ನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 7 times, 1 visits today)