ರೈತರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು

 ತುಮಕೂರು:

      ಸತತ ಬರಗಾಲದಿಂದ ತತ್ತರಿಸಿರುವ ದೇಶದ ಬೆನ್ನೆಲಬು, ನಮ್ಮೆಲ್ಲರ ಅನ್ನದಾತರಾದ ರೈತರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ಸೃಷ್ಟಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹುಚ್ಚಯ್ಯ ಅಭಿಪ್ರಾಯಪಟ್ಟರು.

      ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಾಲ್ಲೂಕು ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿಕ ಸಮಾಜದ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ರೈತರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಾ, ತಾವು ಬೆಳೆದ ಬೆಳೆಗೆ ನಿರೀಕ್ಷಿತ ಫಲ ದೊರೆಯದಿದ್ದಾಗ ಹತಾಶರಾಗಿ ಆತ್ಮಹತ್ಯೆಗೆ ಶರಣಾಗದೆ ಧೈರ್ಯವಾಗಿ ಪರಿಸ್ಥಿತಿಯನ್ನು ಎದುರಿಸಬೇಕು. ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕೆಂದು ತಿಳಿಸಿದರು.

      ಉಪ ಕೃಷಿ ನಿರ್ದೇಶಕ ಡಾ: ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರವು ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ರೈತರಿಗೆ ಮನವರಿಕೆ ಮಾಡಿದರು.

      ಜಂಟಿ ಕೃಷಿ ನಿರ್ದೇಶಕ ಡಾ: ಜಯಸ್ವಾಮಿ ಮಾತನಾಡಿ, ರೈತರು ಕೃಷಿ ಭಾಗ್ಯ ಯೋಜನೆಯ ಪ್ರಯೋಜನ ಪಡೆದುಕೊಂಡು ಸಮಗ್ರ ಬೇಸಾಯ ಕ್ರಮವನ್ನನುಸರಿಸಿ ಬರಗಾಲದಲ್ಲೂ ನೀರಿನ ಅಭಾವವನ್ನು ತಡೆಗಟ್ಟುವಂತಹ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಕೃಷಿ ಹೊಂಡದಲ್ಲಿ ಸಂಗ್ರಹವಾದ ನೀರಿನಿಂದ ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು.

      ಹಿರೇಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಜ್ಞಾನ ಕೇಂದ್ರದ ಸಂಯೋಜಕ ಡಾ: ಲೋಗಾನಂದನ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಲೋಕೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿತರು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.

(Visited 12 times, 1 visits today)

Related posts