ತುಮಕೂರು :

      ತುಮಕೂರು ನಗರದಲ್ಲಿ ಜನವರಿ 2ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಂದೂವರೆ ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

      ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠ ಹಾಗೂ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಹಾಗೂ ಅಧಿಕಾರಿಗಳ ಸಭೆ ನಡೆಸಿ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ/ರೈತರಿಗೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ರಸ್ತೆಗಳಲ್ಲಿ ಧ್ವನಿವರ್ಧಕಗಳನ್ನು ಹಾಗೂ ಎಲ್‍ಇಡಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

      ಜನವರಿ 2ರಂದು ಮಧ್ಯಾಹ್ನ ಸುಮಾರು 2.15ಕ್ಕೆ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು. ಸಮಾವೇಶದಲ್ಲಿ ದೇಶದ 16 ರಾಜ್ಯಗಳ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ಆಯ್ದ 28 ಮಂದಿ ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ತಿಳಿಸಿದರು.

      ಇದೊಂದು ಅದ್ದೂರಿ ಸಮಾರಂಭವಾಗಿದ್ದು, ಜಾರ್ಖಂಡ್‍ನ ಮುಖ್ಯಮಂತ್ರಿಗಳು, ಉತ್ತರಖಾಂಡ್‍ನ ರಾಜ್ಯಪಾಲರು ಸೇರಿದಂತೆ ವಿವಿಧ ರಾಜ್ಯದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಮೊದಲು ಸಿದ್ಧಗಂಗಾ ಮಠಕ್ಕೆ ಆಗಮಿಸುವ ಪ್ರಧಾನ ಮಂತ್ರಿಗಳು ಮಠದಲ್ಲಿ ಲಿಂ.ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಗಳ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಜ್ಯೂನಿಯರ್ ಕಾಲೇಜಿನಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಕೃಷಿ ಸಮ್ಮಾನ್‍ನ 4 ನೇ ಹಂತದ ಹಣವನ್ನು ರೈತರಿಗೆ ಏಕಕಾಲದಲ್ಲಿ ಬಿಡುಗಡೆ ಮಾಡಲಿದ್ದಾರೆ. ಸಮಾರಂಭದ ವೀಕ್ಷಣೆಗೆ ಎಲ್‍ಇಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

      ನಗರದಲ್ಲಿ ಕಾರ್ಯಕ್ರಮಕ್ಕೆ ಬರುವವರಿಗೆ ರಿಂಗ್‍ರಸ್ತೆ, ಶಿರಾ ಗೇಟ್‍ಬಳಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಟೌನ್‍ಹಾಲ್, ಜಿಲ್ಲಾ ಪಂಚಾಯತ್‍ನ ಹಿಂದಿನ ರಸ್ತೆ, ಹಾಗೂ ಕೋಡಿಬಸವಣ್ಣ ಸರ್ಕಲ್ ಬಳಿ ಬಸ್‍ನಿಂದ ಇಳಿದು ವೇದಿಕೆ ಕಡೆಗೆ ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ನಾಗೇಶ್, ಜಯರಾಂ, ಸಂಸದರಾದ ಜಿ.ಎಸ್.ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್ ಗೌಡ, ಮತ್ತಿತರರು ಹಾಜರಿದ್ದರು.

(Visited 15 times, 1 visits today)