
ಹುಳಿಯಾರು: “ಮಾನವೀಯತೆ ಎಲ್ಲಕ್ಕಿಂತ ದೊಡ್ಡದು” ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊ0ದು ನಿಜ ಮಾಡಿ ತೋರಿಸಿದೆ. ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಮುಸ್ಲಿಂ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ.
ಘಟನೆಯ ಹಿನ್ನೆಲೆ: ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು.
ಸಕಾಲಿಕ ಸ್ಪಂದನೆ: ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು.
ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿ0ದ ನಾವು ಇಲ್ಲಿಗೆ ಬಂದಿದ್ದು, ಈ ಯುವಕನನ್ನು ನಮ್ಮ ಸುಪರ್ದಿಗೆ ಪಡೆದು ಆಶ್ರಯ ಒದಗಿಸುತ್ತಿದ್ದೇವೆ. ಇನ್ನು ಮುಂದೆ ಈತನ ಸುರಕ್ಷತೆಯ ಜವಾಬ್ದಾರಿ ನಮ್ಮದು,” ಎಂದು ತಿಳಿಸಿದರು. ಇಲಾಖೆಯ ವಾಹನದಲ್ಲಿ ಯುವಕನನ್ನು ಸುರಕ್ಷಿತವಾಗಿ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಯಿತು.
ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿರುವ ಸಂದರ್ಭದಲ್ಲಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಒಬ್ಬ ಅನಾಥ ಯುವಕನಿಗೆ ಬದುಕು ಕಟ್ಟಿಕೊಟ್ಟ ಇಮ್ರಾಜ್ ಮತ್ತು ಗೆಳೆಯರ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.





