ತುಮಕೂರು: ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಡಾ: ಎಸ್. ಸಿದ್ದರಾಮಣ್ಣ ತಿಳಿಸಿದರು.
ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಸಹಭಾಗಿತ್ವದಲ್ಲಿ ನಗರದ ಬಾಲಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳ ಜ್ಞಾಪಕ ಶಕ್ತಿ ಚುರುಕಾಗುವುದರೊಂದಿಗೆ ಆತ್ಮ ವಿಶ್ವಾಸ ವೃದ್ಧಿಯಾಗುತ್ತದೆ. ಅಲ್ಲದೆ ವಿದ್ಯಾರ್ಥಿಗಳಲ್ಲಿ ಕಲಿಕಾ ಶಕ್ತಿಯನ್ನು ಮೂಡಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ತಾಲ್ಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಿರಿಯ/ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ಪ್ರೌಢಶಾಲೆ ವಿಭಾಗದಿಂದ ಭಾಗವಹಿಸಿ ಪ್ರಥಮ ಬಹುಮಾನ ಗಳಿಸಿದ ತಂಡದ ಮಕ್ಕಳಿಗಾಗಿ ಈ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ರಸಪ್ರಶ್ನೆ ಸ್ಪರ್ಧೆಯಲ್ಲಿ ತಕ್ಷಣ ಉತ್ತರಿಸುವ ಮೂಲಕ ಮೆದುಳಿನ ಸಾಮರ್ಥ್ಯ ಮತ್ತು ಗ್ರಹಿಕೆ ಹೆಚ್ಚಾಗುತ್ತದೆ. ಮಕ್ಕಳಲ್ಲಿ ಕಡಿಮೆ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ವೇಗ ಬೆಳೆಯುತ್ತದೆ. ಮಕ್ಕಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಂಬಿಕಾ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಸ್ಪರ್ಧಾತ್ಮಕ ಜ್ಞಾನ ಮುಖ್ಯವಾಗಿದೆ. ಮಕ್ಕಳಲ್ಲಿರುವ ಪ್ರತಿಭೆ ಉತ್ತಮ ಭವಿಷ್ಯಕ್ಕೆ ಸಹಕಾರಿಯಾಗಲಿದ್ದು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಜಿಲ್ಲಾ ಬಾಲಭವನದಲ್ಲಿ ಈ ವೇದಿಕೆಯನ್ನು ಕಲ್ಪಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವನ್ನು ಮಾಡಿಕೊಡುವುದು ಪೋಷಕರ ಜವಬ್ದಾರಿಯಾಗಿರುತ್ತದೆ ಎಂದ ಅವರು, ಜಿಲ್ಲಾ ಬಾಲಭವನ ವತಿಯಿಂದ ಮುಂದಿನ ಪ್ರತಿ ಮಾಹೆಗಳಲ್ಲಿ ಕಾರ್ಯಕ್ರಮಗಳು ಆಯೋಜನೆಯಾಗುತ್ತಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ, ದ್ವಿತೀಯ, ತೃತೀಯ ಮತ್ತು ಸಮಾಧಾನಕರ ಸ್ಥಾನಗಳನ್ನು ಪಡೆದ ಮಕ್ಕಳಿಗೆ ಬಹುಮಾನ, ಪ್ರಮಾಣ ಪತ್ರ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲಭವನ ಸಮಿತಿ ವ್ಯವಸ್ಥಾಪಕ ಚಿದಾನಂದ ಮೂರ್ತಿ, ಸ್ಪರ್ಧಾ ತೀರ್ಪುಗಾರರಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ರವೀಶ್ ಹಾಗೂ ಹನುಮಂತರಾಜು, ಜಿಲ್ಲಾ ಬಾಲಭವನ ಸಮಿತಿ ಕಾರ್ಯಕ್ರಮ ಸಂಯೋಜಕಿ ಮಮತ ಪಿ., ಕಾರ್ಯಕ್ರಮ ಸಹಾಯಕಿ ಶಿಲ್ಪ ಜಿ.ಎಸ್, ಹಾಗೂ ವಿವಿಧ ಶಾಲೆಯ ಮಕ್ಕಳು, ಶಿಕ್ಷಕರು, ಮೇಲ್ವಿಚಾರಕರು, ಪೋಷಕರು ಉಪಸ್ಥಿತರಿದ್ದರು.
(Visited 1 times, 1 visits today)





