ತುಮಕೂರು
ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸಮಂತಾ ಕರೆ ನೀಡಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 2026-27ನೇ ಸಾಲಿನ ತುಮಕೂರು ತಾಲ್ಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು. ಆರೋಗ್ಯಕರ ಜೀವನಶೈಲಿಗೆ ಕ್ರೀಡೆ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡೆಯನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಅವರು ಶುಭ ಹಾರೈಸಿದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ಚೇತನ ಅವರು ಚೆಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹನುಮೇಶ್ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿದರು.
ಕ್ರೀಡಾಕೂಟದಲ್ಲಿ ತುಮಕೂರು ತಾಲ್ಲೂಕಿನ ವಿವಿಧ ಶಾಲೆಗಳ ಸುಮಾರು 700 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ 10 ಮಂದಿ ಸಂಚಾಲಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾವೀರ ಎಂ.ಜಿ. ಸೇರಿದಂತೆ ವಿವಿಧ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.





