ತುಮಕೂರು: ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಜನಸೇವೆ ಮಾಡಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಹೇಳಿದರು.
ತಿಪಟೂರು ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿಂದು ನಡೆದ ಪ್ರಜಾಸೇವಾ ಅಭಿಯಾನದ ಜನಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು. ನೈಜ ಸಮಸ್ಯೆಗಳಿರುವ ಅರ್ಜಿಗಳಿಗೆ ಅಧಿಕಾರಿಗಳು ಆದ್ಯತೆ ನೀಡಿ ಪರಿಹಾರ ಕಲ್ಪಿಸಲಿದ್ದಾರೆ ಎಂದರು.
ಮುಖ್ಯಮಂತ್ರಿ ಅವರ ಮಹತ್ವದ ಆಶಯದಂತೆ ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಪ್ರಜಾಸೇವಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಜನರ ಅಹವಾಲುಗಳಿಗೆ ಪಾರದರ್ಶಕವಾಗಿ ಸ್ಪಂದಿಸಿ, ಅರ್ಜಿಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯ 10 ತಾಲ್ಲೂಕುಗಳಿಂದ ಈಗಾಗಲೇ ಸುಮಾರು 4,600 ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಸಲ್ಲಿಕೆಯಾದ ಅರ್ಜಿಗಳು ಯಾವ ಹಂತದಲ್ಲಿವೆ ಎಂಬ ಮಾಹಿತಿಯನ್ನು ಅರ್ಜಿದಾರರ ಮೊಬೈಲ್ಗೆ ರವಾನಿಸಲಾಗುತ್ತದೆ. ಇದರಿಂದ ತಮ್ಮ ಅರ್ಜಿಯ ಪ್ರಗತಿಯನ್ನು ಸಾರ್ವಜನಿಕರು ತಿಳಿದುಕೊಳ್ಳಬಹುದು. ತಾಲ್ಲೂಕು ಮಟ್ಟದಲ್ಲಿ ಆರಂಭವಾಗಿರುವ ಈ ಅಭಿಯಾನವನ್ನು ಮುಂದಿನ ದಿನಗಳಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ವಿಸ್ತರಿಸಲಾಗುವುದು. ಕುಡಿಯುವ ನೀರು, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಸೇವೆಗಳ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಹಲವಾರು ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಸೇವೆಗಳ ಪ್ರಯೋಜನ ಪಡೆದರು.
ಈ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಶಿಶುಗಳಿಗೆ ಅನ್ನಪ್ರಾಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಿವಪ್ಪ, ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುμÁ್ಠನ ಸಮಿತಿ ಅಧ್ಯಕ್ಷ ಎಂ.ಎನ್. ಕಾಂತರಾಜು, ತಹಶೀಲ್ದಾರ್ ಮೋಹನ್ ಕುಮಾರ್, ಜಿ.ಪಂ. ಉಪಕಾರ್ಯದರ್ಶಿ ಈಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಸಿದ್ದರಾಮಣ್ಣ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)





