ತುಮಕೂರು:
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಉಪಚುನಾವಣೆಯಲ್ಲಿ ನನ್ನ ಕೈ ಹಿಡಿಯಲಿದೆ ಎಂದು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದರು.
      ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರು ಎಂದಿಗೂ ನನ್ನ ಕೈ ಬಿಡಲಾರರು. ನಾನು ಇದುವರೆಗೂ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಏನೆಂಬುದು ಅವರಿಗೆ ಗೊತ್ತಿದೆ ಹಾಗಾಗಿ ಅವರು ನನ್ನ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದರು. 
ನನ್ನ ಮೇಲೆ ವಿಶ್ವಾಸವಿಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ದೆಹಲಿಯ ವರಿಷ್ಠರು ಟಿಕೆಟ್ ನೀಡಿದ್ದಾರೆ. ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ಆರ್.ಆರ್.ನಗರ ಜನತೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇರಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ ಅಭಿವೃದ್ಧಿ ಕಾರ್ಯಗಳು, ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳು, ನಾನು ಶಾಸಕನಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ ಎಂದು ಅವರು ಪುನರುಚ್ಚರಿಸಿದರು.
ಉಪಚುನಾವಣೆ ಇರುವ ಹಿನ್ನೆಲೆಯಲ್ಲಿ ಇಂದು ಶ್ರೀಮಠಕ್ಕೆ ಬಂದು ಲಿಂಗೈಕ್ಯ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇನೆ. ಹಿರಿಯ ಶ್ರೀಗಳು ಮತ್ತು ಸಿದ್ದಲಿಂಗ ಶ್ರೀಗಳ ಆಶೀರ್ವಾದ ಸದಾ ನನ್ನ ಮೇಲಿದೆ. ಹಾಗಾಗಿ ಈ ಉಪಚುನಾವಣೆಯಲ್ಲಿ ನಾನು ಜಯಶೀಲನಾಗುತ್ತೇನೆ ಎಂದು ಅವರು ಹೇಳಿದರು.
ಲಿಂಗೈಕ್ಯ ಹಿರಿಯ ಶ್ರೀಗಳು ಮಾಡಿರುವ ಸಮಾಜ ಸೇವೆ, ಅನ್ನದಾಸೋಹ, ವಿದ್ಯಾರ್ಥಿಗಳಿಗೆ ಶಿಕ್ಷಣ ಸೇವೆಯನ್ನು ಸೂರ್ಯ ಚಂದ್ರ ಇರುವವರೆಗೂ ಯಾರೂ ಮರೆಯಲಾಗುವುದಿಲ್ಲ ಎಂದರು.



