ತುಮಕೂರು: ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡವರಿಗೆ ಶೀಘ್ರವೇ ಒತ್ತುವರಿ ತೆರವಿಗಾಗಿ ನೋಟೀಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಹಶೀಲ್ದಾರ್ ರಾಜೇಶ್ವರಿಗೆ ಸೂಚನೆ ನೀಡಿದರು.
ತಾಲ್ಲೂಕಿನ ಹೆಬ್ಬೂರು ಹೋಬಳಿ ಬನ್ನಿಕುಪ್ಪೆ ಗ್ರಾಮದ ಸ.ನಂ. ೮೨ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಬಗ್ಗೆ ಶಾಸಕರು ನೀಡಿದ ದೂರಿನ ಮೇರೆಗೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಕೂಡಲೇ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಮಾತನಾಡಿದ ಕಂದಾಯ ನಿರೀಕ್ಷಕ ಎಂ.ಮAಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ-೫೭ನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ನಂತರ ಸ.ನಂ. ೧೫೬ರ ಹೆಬ್ಬೂರು ಅಮಾನಿಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು ೪೨೦ ಎಕರೆ ವಿಸ್ತೀರ್ಣವನ್ನು ಹೊಂದಿರುವ ಈ ಕೆರೆಯ ಮಣ್ಣನ್ನು ಅಕ್ರಮವಾಗಿ ತೋಟ, ಇಟ್ಟಿಗೆ ಕಾರ್ಖಾನೆಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂಬ ಸಾರ್ವಜನಿಕ ದೂರುಗಳು ಬಂದಿವೆ. ಅಕ್ರಮವಾಗಿ ಕೆರೆಯ ಮಣ್ಣನ್ನು ಸಾಗಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡಬೇಕು. ಈ ಕೆರೆಯಲ್ಲಿಯೂ ಉಳುಮೆ ಮಾಡಲು ಒತ್ತುವರಿ ಮಾಡಿಕೊಂಡಿರುವುದು ಗಮನಿಸಿದ ಅವರು ಕೆರೆಯ ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಭೂಮೇಶ್ ನಾಯ್ಕ್, ಗ್ರಾಮ ಆಡಳಿತಾಧಿಕಾರಿ ಸವಿತ, ತೇಜಸ್ವಿನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
(Visited 1 times, 1 visits today)