ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ ೭ರಂದು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವ ಹಿನ್ನೆಲೆಯಲ್ಲಿ ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬ0ಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಬಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನವೆಂಬರ್ ೭ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲ್ಲೂಕಿನ ಹೆಬ್ಬೂರು ಹೋಬಳಿ ಬಿದರೆಕಟ್ಟೆ ಮತ್ತು ಮಾಕನಹಳ್ಳಿ ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್, ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ೩೦ ಎಂಎಲ್‌ಡಿ ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ, ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ನಿರ್ಮಾಣ, ಸಾರ್ವಜನಿಕರಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ನೆರಳು, ವಾಹನ ನಿಲುಗಡೆ, ವೈದ್ಯಕೀಯ ಸಹಾಯ ಕೇಂದ್ರ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಆಸ್ಪತ್ರೆ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದ0ತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಂಚಾರಿ ನಿಯಂತ್ರಣ, ಆಂಬುಲೆನ್ಸ್ ಸೌಲಭ್ಯ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾ ಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)