ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ದ್ವಿತೀಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಗೆ ಕಳೆದ ಆಯವ್ಯಯದಲ್ಲಿ ರಸ್ತೆ ಕಾಮಗಾರಿಗಳಿಗಾಗಿ ಸುಮಾರು ೬೩೦ ಕೋಟಿ ರೂ. ಮಂಜೂರು ಮಾಡಲಾಗಿದ್ದರೂ ಈವರೆಗೆ ಒಂದೂ ಕಾಮಗಾರಿಗಳನ್ನು ಆರಂಭಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಡಿಸೆಂಬರ್ ಒಳಗೆ ಟೆಂಡರ್ ಕರೆದು ಗುದ್ದಲಿ ಪೂಜೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಂಚಾಯತ್ ರಾಜ್ ಮತ್ತು ಲೋಕೋಪಯೋಗಿ ಇಲಾಖೆಗಳ ವ್ಯಾಪ್ತಿಯಲ್ಲಿನ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳು ಆಮೇಗತಿಯಲ್ಲಿ ಸಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷö್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿಯ ಪ್ರಗತಿ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಹಿಂದೆ ಇನ್ನೂ ಪೂರ್ಣವಾಗದೆ ಉಳಿದಿರುವ ಕಾಮಗಾರಿಗಳನ್ನು ಜನರ ಸಹಕಾರದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಕಾಮಗಾರಿಗಳ ಗುಣಮಟ್ಟವನ್ನು ಕಾಪಾಡುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಈ ಹಿಂದೆ ಕೈಗೊಂಡ ಕಾಮಗಾರಿಗಳಿಗೆ ಅನುದಾನ ಮಂಜೂರಾಗುವುದು ಬಾಕಿ ಇದ್ದಲ್ಲಿ ಲೋಕೋಪಯೋಗಿ ಇಲಾಖೆಯ ಎರಡೂ ವಿಭಾಗದ ಅಧಿಕಾರಿಗಳು ವಿವರವಾದ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ತ್ವರಿತವಾಗಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.
ಸಭೆಯಲ್ಲಿ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಬಿ. ಸುರೇಶಗೌಡ, ಜಿ.ಬಿ. ಜ್ಯೋತಿಗಣೇಶ್, ಸಿ.ಬಿ. ಸುರೇಶಬಾಬು, ಎಂ.ಟಿ. ಕೃಷ್ಣಪ್ಪ, ಎಚ್.ವಿ. ವೆಂಕಟೇಶ್, ಕೆ. ಷಡಕ್ಷರಿ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ ಹಾಗೂ ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)