
ತುಮಕೂರು: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲಾ ಆವರಣದಲ್ಲಿ ಕಂಡು ಬರುವಂತಹ ಅಪಾಯಕಾರಕ ವಿದ್ಯುತ್ ಲೈನ್, ಒಣಗಿದ ಮರ, ಮುಚ್ಚಿಲ್ಲದ ಕೊಳವೆ ಬಾವಿ, ಕೃಷಿ ಹೊಂಡಗಳು ಹಾಗೂ ಇತರ ಅಪಾಯ ಉಂಟು ಮಾಡಬಹುದಾದವುಗಳನ್ನು ತಕ್ಷಣ ಗುರುತಿಸಿ ತೆರವುಗೊಳಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ: ತಿಪ್ಪೇಸ್ವಾಮಿ ಕೆ.ಟಿ. ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಹಂತದ ಅಧಿಕಾರಿಗಳೊಂದಿಗೆ ನಡೆದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ೨೦೦೯ರ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣದ ಹಕ್ಕನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿವಹಿಸಬೇಕು ಎಂದು ಸೂಚಿಸಿದರು.
ಕೇವಲ ಪಠ್ಯದ ಶಿಕ್ಷಣ ನೀಡುವುದಲ್ಲದೆ, ಮಕ್ಕಳಿಗೆ ಕ್ರೀಡೆಗೂ ಮಹತ್ವ ನೀಡಬೇಕು ಹಾಗೂ ಅದಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು. ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶೈಕ್ಷಣಿಕ ವರ್ಷದಲ್ಲಿ ಪ್ರೌಢಶಾಲೆಯಲ್ಲಿ ೯ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ೧೦ನೇ ತರಗತಿಗೆ ದಾಖಲಾಗದೇ ಇರುವಂತಹ ಮಕ್ಕಳ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಲು ಬಿಡಬಾರದು. ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಇನ್ನಿತರ ಅಕ್ರಮ ಕೃತ್ಯಗಳಿಗೆ ಬಲಿಯಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಇಂತಹ ವಿದ್ಯಾರ್ಥಿಗಳನ್ನು ಗುರುತಿಸಿ, ಮತ್ತೆ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿದರು.
ಮಗುವು ನಿರಂತರವಾಗಿ ಏಳು ದಿನಗಳ ಕಾಲ ಶಾಲೆಗೆ ಗೈರು ಹಾಜರಾದರೆ, ಆ ಮಗುವನ್ನು ಶಾಲೆ ಬಿಟ್ಟ ಮಗು ಎಂದು ಘೋಷಿಸಿದ ನಂತರ, ಇಲಾಖೆಯು ಮುಂದಿನ ಯಾವ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ಅನುಸರಿಸಬೇಕಾದ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲಾ ವಾತಾವರಣಕ್ಕೆ ಕರೆತರುವ ಕಾರ್ಯವು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಆಗಬೇಕು. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಮತ್ತು ಅವರನ್ನು ಶಾಲೆಗೆ ಸೇರಿಸಲು ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ನೇಮಕಗೊಂಡಿರುವ ಅತಿಥಿ ಶಿಕ್ಷಕರ ಪೊಲೀಸ್ ಪರಿಶೀಲನೆ ಆಗಿರುವ ಕುರಿತು ಉಪನಿರ್ದೇಶಕರ (ಡಿಡಿಪಿಐ) ಕಚೇರಿಯಲ್ಲಿ ಸಮಗ್ರ ಮಾಹಿತಿ ಲಭ್ಯವಿರಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಅಡುಗೆ ಕೋಣೆಗಳ ಸ್ವಚ್ಛತೆ, ವಿದ್ಯಾರ್ಥಿಗಳ ಶೌಚಾಲಯಗಳ ನಿರ್ವಹಣೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರಲ್ಲದೆ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತç, ಶೂ ಹಾಗೂ ಇತರ ಅಗತ್ಯ ಸಾಮಗ್ರಿಗಳನ್ನು ಶೈಕ್ಷಣಿಕ ವರ್ಷ ಆರಂಭದಲ್ಲೇ ಸರಿಯಾದ ಸಮಯಕ್ಕೆ ವಿತರಿಸುವುದು ಕಡ್ಡಾಯ ಎಂದು ತಿಳಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರುಗಳಾದ ಡಾ: ರಘುಚಂದ್ರ, ಮಾಧವರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಎಲ್ಲಾ ತಾಲೂಕಿನ ಬಿಇಓಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



