
ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಸಂಬ0ಧ ಕೈಗೊಂಡಿದ್ದ ಪೂರ್ವಭಾವಿ ಚಟುವಟಿಕೆಯಲ್ಲಿ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾನಗರ ಪಾಲಿಕೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ-೨೦೨೬ರ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ೨೦೦೨ರ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ೨೦೨೫ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಮ್ಯಾಪಿಂಗ್ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ನಿವಾರಿಸಿ, ನಿಖರ ಮತ್ತು ದೋಷರಹಿತ ಪಟ್ಟಿಯನ್ನು ಸಿದ್ಧಪಡಿಸುವುದು ಅರಿವು ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ ಎಂದರು.
ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ಕ್ಕೆ ಸಂಬAಧಿಸಿದAತೆ ಈವರೆಗೆ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ವಿಶೇಷ ಪರಿಷ್ಕರಣೆ ಅಭಿಯಾನವು ಮತದಾನದ ಪ್ರಕ್ರಿಯೆಯ ಅತ್ಯಂತ ಮಹತ್ವದ ಹಂತವಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿ ಮತ್ತು ಮೇಲ್ವಿಚಾರಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪರಿಷ್ಕರಣೆಯ ಹೆಚ್ಚಿನ ಪ್ರಗತಿಗೆ ಸಹಕರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಯೋಗಾನಂದ, ಸಹಾಯಕ ಮತದಾರರ ನೋಂದಣಾಧಿಕಾರಿ ಮನುಕು ಮಾರ್, ಚುನಾವಣಾ ತಹಶೀಲ್ದಾರ್ ಅನಿತ ಲಕ್ಷಿö್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



