ಹುಳಿಯಾರು: ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜಕೀಯ ಭೇದವಿಲ್ಲದೆ, ಎಲ್ಲರೂ ಒಗ್ಗಟ್ಟಾಗಿ ಸಹಕಾರ ರಂಗದ ಮೂಲಕ ಅಭಿವೃದ್ಧಿಯತ್ತ ಸಾಗಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್ ಕರೆ ನೀಡಿದರು.
ಬೆಳಗುಲಿ ಗ್ರಾಮದಲ್ಲಿ ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮತ್ತು ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಹಕಾರ ಕುರಿತ ಅರಿವು ಮತ್ತು ಪ್ರಚಾರ ಶಿಬಿರದಲ್ಲಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ ಸಂಘಗಳು ಯಾವುದೇ ಜಾತಿ, ಪಕ್ಷದ ತಾರತಮ್ಯವಿಲ್ಲದೆ ಸಮಾನತೆಯನ್ನು ಬಿಂಬಿಸುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ರಮೇಶ್ ಯಾವುದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಅಪಾರ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸೋಮಶೇಖರ್, ರಾಮಯ್ಯ, ಪ್ರೇಮಕುಮಾರ್, ರಾಜಣ್ಣ, ಕುಮಾರಸ್ವಾಮಿ, ಹೊನ್ನಪ್ಪ, ರಮೇಶ್, ರಾಮಚಂದ್ರ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ರಂಗಸ್ವಾಮಿ ಸೇರಿದಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

(Visited 1 times, 1 visits today)