
ಪಾವಗಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಯರ ವಸತಿ ನಿಲಯದ ಬಳಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ವಸತಿ ನಿಲಯದ ಸುತ್ತಮುತ್ತ ದುರ್ವಾಸನೆ ಬೀರುತ್ತಿರುವುದರಿಂದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಶುದ್ಧ ಗಾಳಿಯೂ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಗಬ್ಬು ವಾಸನೆಯಿಂದಾಗಿ ದಿನನಿತ್ಯದ ಓದು, ಊಟ ಹಾಗೂ ನಿದ್ರೆಗೂ ತೊಂದರೆಯಾಗುತ್ತಿದ್ದು, ಆರೋಗ್ಯ ಕೈಕೊಡುವ ಭೀತಿ ಎದುರಾಗಿದೆ.
ಇದಲ್ಲದೆ, ರಸ್ತೆಯ ಮೇಲೆಯೇ ಕೊಳಚೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಸ್ಥಳೀಯ ವಕೀಲರಾದ ಪ್ರಭಾಕರ್ ರವರು ಸಮಸ್ಯೆಯನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪುರಸಭೆ ಸಂಪೂರ್ಣ ನಿರ್ಲಕ್ಷ÷್ಯ ವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯರ ಆರೋಗ್ಯ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಪುರಸಭೆಯು ತಕ್ಷಣವೇ ನಿಂತಿರುವ ಕೊಳಚೆ ನೀರನ್ನು ತೆರವುಗೊಳಿಸಿ, ಸುಸಜ್ಜಿತ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಕ್ಷಣವೇ ಒಳಚರಂಡಿ ನೀರನ್ನು ತೆರವುಗೊಳಿಸಿ ಶುಚಿತ್ವ ಕಾಪಾಡದಿದ್ದರೆ, ಪುರಸಭೆ ಕಚೇರಿಯ ಮುಂಭಾಗದಲ್ಲೇ ಧರಣಿ ನಡೆಸಲಾಗುವುದು ಎಂದು ಸಾರ್ವಜನಿಕರು ಮತ್ತು ಸ್ಥಳೀಯ ಮುಖಂಡರು ಪುರಸಭೆಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಬಿಸಿಎಂ ಇಲಾಖೆಯ ಅಧಿಕಾರಿ ಕುಮಾರ್ ಮಾತನಾಡಿ, ವಿದ್ಯಾರ್ಥಿನಿಲಯದಲ್ಲಿ ಒಟ್ಟು ೧೨೫ ವಿದ್ಯಾರ್ಥಿನಿಯರು ವಾಸಿಸುತ್ತಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಈ ಕುರಿತು ಇಲಾಖೆಯ ವತಿಯಿಂದ ಪುರಸಭೆಗೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ, ಎರಡು-ಮೂರು ಬಾರಿ ಇಲಾಖೆಯ ವತಿಯಿಂದಲೇ ಸ್ವಚ್ಛಗೊಳಿಸಲಾಗಿದೆ ಎಂದು ತಿಳಿಸಿದರು.



