ತುಮಕೂರು: ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಭಾರತೀಯ ಸಂವಿಧಾನದಲ್ಲಿ ಇಂತಹ ಪ್ರಕರಣಗಳನ್ನು ನಿಷೇಧಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ ಧನಪಾಲ ಹವಲೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಂತ ಜೀವ ಜ್ಯೋತಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಗುರುವಾರ ಜರುಗಿದ “ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಹಾಗೂ ಕಾರ್ಯಗಾರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಅನಕ್ಷರತೆ, ಬಡತನವು ಮಾನವ ಕಳ್ಳಸಾಗಾಣಿಕೆಯ ಜಾಲದಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತದೆ. ಈ ಜಾಲದಲ್ಲಿ ಒಮ್ಮೆ ಸಿಲುಕಿಕೊಂಡರೆ ಹೊರ ಬರುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವೆಂದು ತಿಳಿಸಿದರು.
ಮಾನವ ಕಳ್ಳ ಸಾಗಾಣಿಕೆಯಂತಹ ಅಪರಾಧ ಪ್ರಕರಣಗಳು ಘಟಿಸಿದ ನಂತರ ಕಾನೂನು ಕ್ರಮ ತೆಗೆದುಕೊಳ್ಳುವ ಬದಲು ಘಟಿಸುವ ಮುನ್ನವೇ ಪ್ರಕರಣಗಳು ಜರುಗದಂತೆ ಎಚ್ಚರಿಕೆವಹಿಸಬೇಕು. ಮಾನವ ಕಳ್ಳ ಸಾಗಾಣಿಕೆಯಂತಹ ಅಪರಾಧಗಳು ಕಂಡು ಬಂದವರು ಕೂಡಲೇ ಸಂಬAಧಿಸಿದ ಇಲಾಖೆಗೆ ಮಾಹಿತಿ ನೀಡಿದಲ್ಲಿ ಇಂತಹ ಅಮಾನವೀಯ ಘಟನೆಗಳನ್ನು ತಡೆದು ಸಂತ್ರಸ್ಥರಿಗೆ ರಕ್ಷಣೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ: ಸಿದ್ದರಾಮಣ್ಣ ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಿವೈ.ಎಸ್.ಪಿ. ಚಂದ್ರಶೇಖರ್ ಮಾತನಾಡಿ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಂಬಿಕಾ ಕೆ.ಹೆಚ್. ಮಾತನಾಡಿ ಅನೈತಿಕ ಸಾಗಾಣೆ ತಡೆ ಕಾಯ್ದೆಯ ಬಗ್ಗೆ ವಿವರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಪವಿತ್ರ ಆರ್.ಜಿ. ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಣಾಧಿಕಾರಿ ಅನುಷಾ ಡಿ., ಜಿಲ್ಲಾ ಕಾರ್ಮಿಕ ಅಧಿಕಾರಿ ಫೈರೋಜ್ ಪಾಷಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

(Visited 1 times, 1 visits today)