ಪಾವಗಡ: ಪಟ್ಟಣದ ಎಸ್‌ಎಸ್‌ಕೆ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಕಾಗಿನೆಲೆ ಮಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, “ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ. ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಿ ಅವರನ್ನು ಉತ್ತಮ ಆಸ್ತಿಯನ್ನಾಗಿ ರೂಪಿಸಬೇಕು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಮಹಾತ್ಮ ಕನಕದಾಸರ ತತ್ತ÷್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಗುರಿ ಸಾಧಿಸಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್, “ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತರಾಗದೆ ಸಮಾಜಮುಖಿ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಗ್ರಾಮೀಣ ಪ್ರತಿಭೆಗಳಿಗೆ ಅಗತ್ಯ ಸೌಲಭ್ಯ ಮತ್ತು ಸೂಕ್ತ ವೇದಿಕೆ ಕಲ್ಪಿಸಲು ಸರ್ಕಾರ ಹಾಗೂ ನಾವು ಸದಾ ಬದ್ಧರಾಗಿದ್ದೇವೆ. ಸಮಾಜದ ಬೇಡಿಕೆಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು” ಎಂದು ಭರವಸೆ ನೀಡಿದರು.
ಇನ್ಸೆöÊಟ್ ವಿನಯ್ ಕುಮಾರ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆ ತೊರೆದು ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆತ್ಮವಿಶ್ವಾಸದಿಂದ ಸಿದ್ಧತೆ ನಡೆಸಬೇಕು. ಶ್ರಮ, ಏಕಾಗ್ರತೆ ಹಾಗೂ ಸರಿಯಾದ ಮಾರ್ಗದರ್ಶನ ಇದ್ದರೆ ಯಾವುದೇ ಸಾಧನೆ ಅಸಾಧ್ಯವಲ್ಲ ಎಂದು ಹೇಳಿದರು.
ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಶಿಕ್ಷಣದಿಂದಲೇ ಸಮಾಜದ ನೈಜ ಸಬಲೀಕರಣ ಸಾಧ್ಯ. ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಜೊತೆಗೆ ಸಮಾಜದ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಎಸ್‌ಕೆ ಸಂಘದ ಅಧ್ಯಕ್ಷ ಜಿ. ಅನಿಲ್ ಕುಮಾರ್, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆರ್.ಸಿ. ಅಂಜಿನಪ್ಪ, ಶಿಕ್ಷಣವೇ ಸಮುದಾಯದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ಅವಕಾಶ ಮತ್ತು ಮಾರ್ಗದರ್ಶನ ದೊರೆಯಬೇಕು ಎಂದು ಹೇಳಿದರು.
ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ, ಗುಣಮಟ್ಟದ ಶಿಕ್ಷಣ ಹಾಗೂ ವಸತಿ ಸೌಲಭ್ಯ ಒದಗಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ನಿವೃತ್ತ ನ್ಯಾಯಾಧೀಶ ವೇಣುಗೋಪಾಲ್, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಾನೂನು ಅರಿವು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ನ್ಯಾಯ, ಪ್ರಾಮಾಣಿಕತೆಯ ಹಾದಿಯಲ್ಲಿ ಸಾಗಬೇಕು ಎಂದು ಕರೆ ನೀಡಿದರು.
ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಕುರುಬ ಸಮಾಜದ ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ರಾಜಕೀಯವನ್ನು ಮೀರಿದ ಒಗ್ಗಟ್ಟು ಅಗತ್ಯವಾಗಿದೆ. ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗದAತೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ. ಅನಿಲ್ ಕುಮಾರ್, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶೇಷಗಿರಿ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಐ.ಜಿ. ನಾಗರಾಜ್, ಪುರಸಭೆ ಮಾಜಿ ಅಧ್ಯಕ್ಷೆ ಸುಮಾ ಅನಿಲ್, ಮನು ಮಹೇಶ್, ಜಿ.ಎ. ವೆಂಕಟೇಶ್, ಆನಂದಪ್ಪ, ಆರ್.ಎ. ಹನುಮಂತರಾಯಪ್ಪ, ಅನಿಲ್ ಹಂಡೆ, ಕೆ. ಶ್ರೀನಿವಾಸುಲು, ಬಳಸಮುದ್ರ ಗೋವಿಂದಪ್ಪ, ಆರ್.ಎ. ಬಾಲಾಜಿ, ರವಿ, ಈಶ್ವರ್, ಹೊಸಹಳ್ಳಿ ಮಂಜುನಾಥ್, ದೇವರಾಜ್, ಬಾಬು ರಾಮಕೃಷ್ಣಪ್ಪ, ಗಿರೀಶ್, ಪುನೀತ್ ಸೇರಿದಂತೆ ಸಮಾಜದ ಅನೇಕ ಮುಖಂಡರು ಹಾಗೂ ಬಂಧುಗಳು ಉಪಸ್ಥಿತರಿದ್ದರು.

(Visited 1 times, 1 visits today)