ತುಮಕೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತುಮಕೂರು ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ನೇಮಕಾತಿ ಅಕ್ರಮ ಪ್ರಕರಣವನ್ನು ಉನ್ನತ ಮಟ್ಟದ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಸಹಿ ನೀಡಿ ಸಿಬಿಐ ತನಿಖೆಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ವಿದ್ಯಾರ್ಥಿ ಮುಖಂಡ ಎಚ್.ಆರ್. ಗುರು ಪ್ರಸಾದ್, ಕೆಪಿಎಸ್‌ಸಿ ನೇಮಕಾತಿ ಹಗರಣದ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು. ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆಯ ಉತ್ತರ ನೀಡುತ್ತಿರುವುದು ಖಂಡನೀಯ. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದರು.
ಅಭಿಯಾನದಲ್ಲಿ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್ ಹಾಗೂ ವಿದ್ಯಾರ್ಥಿ ಮುಖಂಡರಾದ ಜೀವನ್ ಅರುಣ್, ಶಿವಕುಮಾರ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
(Visited 1 times, 1 visits today)



