ತುಮಕೂರು: ತುಮಕೂರಿನಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ತುಮಕೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಕೊರಟಗೆರೆ, ಪಾವಗಡ, ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ಭಾಗಗಳಿಗೆ ಅಗತ್ಯಕ್ಕೆ ತಕ್ಕಂತೆ ಬಸ್‌ಗಳನ್ನು ಹೆಚ್ಚಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.
ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಸ್ ತಡೆದಿದ್ದಕ್ಕೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಉಚಿತ ಬಸ್ ಪಾಸ್ ನೀಡಲಾಗಿದೆ, ಆದರೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆಯೇ ಇಲ್ಲ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಎಬಿವಿಪಿ ತುಮಕೂರು ವಿಭಾಗ ಸಂಚಾಲಕ ಹೆಚ್.ಆರ್. ಗುರುಪ್ರಸಾದ್ ಮಾತನಾಡಿ, ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಬಸ್ ಪಾಸ್ ನೀಡಿದರೂ ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು..
ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
(Visited 1 times, 1 visits today)



