ತುಮಕೂರು: ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬರನಿರ್ವಹಣೆಗಾಗಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವು ಸಂಗ್ರಹ, ರೈತರಿಗೆ ಬಿತ್ತನೆ ಬೀಜ ವಿತರಣೆಗೆ ಸಂಬAಧಿಸಿದAತೆ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಗರದ ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಬುಗುಡನಹಳ್ಳಿ ಕೆರೆಗೆ ಅಗತ್ಯ ಪ್ರಮಾಣದಲ್ಲಿ ನೀರು ಸಂಗ್ರಹವಾಗುವAತೆ ಕ್ರಮ ವಹಿಸಬೇಕು. ನಗರಕ್ಕೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ನೀರಿನ ಮೂಲಗಳ ಸ್ಥಿತಿ-ಗತಿಯನ್ನು ನಿರಂತರವಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳು ಹಾಗೂ ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಪ್ರದೇಶಗಳಲ್ಲಿ ಪರ್ಯಾಯ ನೀರಿನ ಮೂಲಗಳು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ದೃಷ್ಟಿಯಿಂದ ಕುಡಿಯುವ ನೀರು, ಜಾನುವಾರುಗಳ ಮೇವು ಮತ್ತು ರೈತರಿಗೆ ಬಿತ್ತನೆ ಬೀಜ ಪೂರೈಕೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಬಿತ್ತನೆ ಪ್ರಮಾಣವನ್ನು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸರ್ಕಾರದ ವತಿಯಿಂದ ವಿತರಿಸಿರುವ ಬೀಜ ಹಾಗೂ ಕೃಷಿ ಕಿಟ್‌ಗಳು ರೈತರಿಗೆ ಸಮರ್ಪಕವಾಗಿ ತಲುಪಿ, ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
(Visited 1 times, 1 visits today)





