
ತುಮಕೂರು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ನಿರಂತರವಾಗಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು ಎಂದು ಸೀತಾ ಪ್ರೌಢಶಾಲೆಯ ಕಾರ್ಯದರ್ಶಿ ಜಿ.ಬಿ. ಮಲ್ಲಪ್ಪ ಕರೆ ನೀಡಿದರು.
ನಗರದ ವಿಜಯನಗರದಲ್ಲಿರುವ ಸರ್ವೋದಯ ಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ವಲಯ-೨ರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಆಸಕ್ತಿ ವಹಿಸಿ ಪಾಲ್ಗೊಳ್ಳಬೇಕು. ಈ ಮೂಲಕ ಸಮಾಜವನ್ನು ತಿದ್ದುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಚಟುವಟಿಕೆಯಲ್ಲೂ ನಿರಂತರವಾಗಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.
ಸೀತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್ ಹೆಚ್. ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡೆ ಎನ್ನುವುದು ಬಹುಮುಖ್ಯವಾದ ಭಾಗ. ಹಾಗಾಗಿ ವಿದ್ಯಾರ್ಥಿಗಳು ಕ್ರೀಡೆಯನ್ನು ನಿರಂತರವಾಗಿ ಆಡಬೇಕು. ಜತೆಗೆ ಮಾನಸಿಕ-ದೈಹಿಕ ಆರೋಗ್ಯವನ್ನು ಸಮಾನವಾಗಿ ಕಾಪಾಡಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಆರೋಗ್ಯದ ಜತೆಗೆ ಉನ್ನತ ಮಟ್ಟದ ಶಿಕ್ಷಣ ಪಡೆಯಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಬಂಡಿ ಎಜುಕೇಷನ್ ಸೊಸೈಟಿಯ ಉಂಡೆ ರಾಮಯ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವನ್ನು ಶಿಕ್ಷಕರುಗಳು ಮಾಡಬೇಕು. ಹಾಗೆಯೇ ಮಕ್ಕಳು ಸಹ ಕ್ರೀಡೆಯಲ್ಲಿ ಭಾಗಿಯಾಗುವ ಮೂಲಕ ದೈಹಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.
ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಪಾಠದ ಕಲಿಕೆಯ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಮಾನಸಿಕ-ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಬೇಕು. ಈ ಮೂಲಕ ಕ್ರೀಡೆಯ ಬಗ್ಗೆ ಪ್ರತಿಯೊಬ್ಬರೂ ಒಲವು ತೋರಬೇಕು ಎಂದರು.
ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಪಟುಗಳಾದರೆ ಮುಂದಿನ ದಿನಗಳಲ್ಲಿ ಉದ್ಯೋಗದಲ್ಲೂ ಮೀಸಲಾತಿಯೂ ಸಿಗಲಿದೆ. ಹಾಗಾಗಿ ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಗೂ ಒತ್ತು ನೀಡಬೇಕು ಎಂದು ಅವರು ಸಲಹೆ ಮಾಡಿದರು.
ಹೋಬಳಿ ಮಟ್ಟದ ವಲಯ-೨ರ ಕ್ರೀಡಾಕೂಟದಲ್ಲಿ ೮, ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಖೋಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಮಹಾವೀರ್ ಜೈನ್, ಸಮನ್ವಯಾಧಿಕಾರಿ ಗೋವಿಂದರಾಜು, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ್, ಬಸವಯ್ಯ, ಚನ್ನಬಸವಯ್ಯ, ಮುಖ್ಯ ಶಿಕ್ಷಕ ಶ್ರೀನಿವಾಸ್ ಹೆಚ್., ವೀಣಾ ಚಂದ್ರಕುಮಾರ್, ಜಗದೀಶ್ ಚಂದ್ರಪ್ಪ, ಉಮೇಶ್, ಹನುಮೇಶ್, ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.



