ಪಾವಗಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಸೋಮವಾರ ಪಾವಗಡ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಎಸ್‌ಎಸ್‌ಕೆ ಬಯಲು ರಂಗಮAದಿರದಿAದ ಆರಂಭವಾದ ಪ್ರತಿಭಟನಾ ರ್ಯಾಲಿ ಬೆಸ್ಕಾಂ ಕಚೇರಿಗೆ ತೆರಳಿ ಮುತ್ತಿಗೆ ಹಾಕಿ, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿನಿತ್ಯ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸುವಂತೆ ಒತ್ತಾಯಿಸಲಾಯಿತು.
ಪಾವಗಡದಲ್ಲಿ ಬೃಹತ್ ಪ್ರಮಾಣದಲ್ಲಿ ಸೌರ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ಸ್ಥಳೀಯ ರೈತರಿಗೆ ಸಮರ್ಪಕ ವಿದ್ಯುತ್ ದೊರೆಯುತ್ತಿಲ್ಲ. ಸೌರ ವಿದ್ಯುತ್ ಉತ್ಪಾದನೆಯಲ್ಲಿ ವಿಶ್ವದ ಗಮನ ಸೆಳೆದಿರುವ ಪಾವಗಡವೇ ವಿದ್ಯುತ್ ಸಮಸ್ಯೆಯಿಂದ ಕತ್ತಲಲ್ಲಿ ಮುಳುಗುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮನವಿ ಸ್ವೀಕರಿಸಿದ ಬೆಸ್ಕಾಂ ಜೆಇ ಕೃಷ್ಣಮೂರ್ತಿ, ಬೇಡಿಕೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ವೈ. ರವಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗಳಿಂದ ಪಾವಗಡಕ್ಕೆ ತಕ್ಷಣ ನೀರು ಹರಿಸಬೇಕು. ಗುಟ್ಕಾ ನಿಷೇಧದಿಂದ ಅಡಿಕೆ ಖರೀದಿಗೆ ವರ್ತಕರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಸುಮಾರು ಆರು ತಿಂಗಳಿAದ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಮಾಶಾಸನಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಬರಪೀಡಿತ ಪಾವಗಡದಲ್ಲಿ ಮೇವು ಬ್ಯಾಂಕ್ ಹಾಗೂ ಗೋಶಾಲೆ ಆರಂಭಿಸಬೇಕು. ಕೆಟ್ಟುಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ, ಪಡಿತರ ಚೀಟಿ ಕೆವೈಸಿ ವೇಳೆ ಎದುರಾಗುತ್ತಿರುವ ಸರ್ವರ್ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಇ-ಖಾತೆ ವಿಳಂಬ, ಲ್ಯಾಂಡ್ ಆರ್ಮಿ ಕಾಮಗಾರಿಗಳ ಗುಣಮಟ್ಟ, ಸೌರ ವಿದ್ಯುತ್ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಹಾಗೂ ಪಾವಗಡ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ವಾಕಿಂಗ್ ಪಾರ್ಕ್ ಕಾಮಗಾರಿಯ ಕುರಿತು ತನಿಖೆ ನಡೆಸಿ, ಕ್ರೀಡಾಪಟುಗಳಿಗೆ ಆಗುತ್ತಿರುವ ತೊಂದರೆ ನಿವಾರಿಸುವಂತೆ ತಿಮ್ಮರಾಯಪ್ಪ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎನ್. ತಿಮ್ಮಾರೆಡ್ಡಿ, ಜಿಲ್ಲಾ ಮಾಜಿ ಅಧ್ಯಕ್ಷ ಆರ್.ಸಿ. ಅಂಜನಪ್ಪ, ಸೊಗಡು ವೆಂಕಟೇಶ್, ಎನ್.ಎ. ಈರಣ್ಣ, ಬಲರಾಮರೆಡ್ಡಿ, ಗೋವಿಂದ ಬಾಬು, ಗಡ್ಡಂ ತಿಮ್ಮರಾಜು ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
(Visited 1 times, 1 visits today)



