ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.೯೫ರಷ್ಟು ಎಲ್ಲಾ ಸವಲತ್ತುಗಳಿದ್ದು, ಯಾವುದೇ ಕೊರತೆಗಳಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಲೋಪದೋಷ, ಸಮಸ್ಯೆಗಳಿದ್ದಲ್ಲಿ ಕೂಡಲೇ ಗಮನಕ್ಕೆ ತರಬೇಕೆಂದು ಅಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಜಿಲ್ಲೆಯಲ್ಲಿರುವ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡುತ್ತಿವೆ ಎಂದು ತಿಳಿಸಿದರಲ್ಲದೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ, ವೈದ್ಯರು ಹಾಗೂ ಫಾರ್ಮಸಿಸ್ಟ್ಗಳ ಕೊರತೆಯಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಔಷಧಿಗಳ ಪೂರೈಕೆ ಮತ್ತು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ ಎಂಬ ಪತ್ರಕರ್ತರ ದೂರಿಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಜಿಲ್ಲೆಯಲ್ಲಿ ಸ್ಥಳೀಯ ಡಿಹೆಚ್‌ಓ, ಟಿಹೆಚ್‌ಓ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಬೆಂಬಲವಿಲ್ಲದೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುವುದಿಲ್ಲ. ನಕಲಿ ವೈದ್ಯರನ್ನು ನಿಯಂತ್ರಿಸಲು ಅಧಿಕಾರಿಗಳೊಂದಿಗೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ, ಆಯುರ್ವೇದ, ಯುನಾನಿ, ಹೋಮಿಯೋಪತಿ ವೈದ್ಯರು ನಕಲಿ ವೈದ್ಯರಲ್ಲ. ಆದರೆ ಇವರು ಶಸ್ತçಚಿಕಿತ್ಸೆ ಮಾಡಲು ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದರು.
ಜಿಲ್ಲೆಗೆ ಹೃದ್ರೋಗ ಆಸ್ಪತ್ರೆ ಅವಶ್ಯಕತೆಯಿದೆ ಎಂದು ಮಾಧ್ಯಮದವರ ಬೇಡಿಕೆಗೆ ಉತ್ತರಿಸಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಪ್ರತ್ಯೇಕ ವಿಭಾಗವನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಜಿಲ್ಲೆಯಲ್ಲಿರುವ ಕ್ಯಾನ್ಸರ್ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲು ಶೀಘ್ರದಲ್ಲೇ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ವಿಳಂಬವಾಗಬಾರದು ಎಂಬ ದೃಷ್ಟಿಯಿಂದ ಅಧಿಕಾರಿ/ಸಿಬ್ಬಂದಿಗಳ ಹಾಜರಾತಿ ಮೇಲೆ ನಿಗಾವಹಿಸಲು ಎಐ ಅಟೆಂಡೆನ್ಸ್ ಕ್ಯಾಮೆರಾಗಳನ್ನು ಅಳವಡಿಸುವ ಚಿಂತನೆ ಮಾಡಲಾಗಿದೆ ಎಂದರಲ್ಲದೆ, ಸಾರ್ವಜನಿಕರೂ ಸಹ ಆಹಾರ ಶೈಲಿಯನ್ನು ಬದಲಾಯಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅತಿಯಾದ ಎಣ್ಣೆ, ಉಪ್ಪು, ಸಕ್ಕರೆ ಸೇವಿಸದಂತೆ ಗಮನ ಹರಿಸಬೇಕು. ಜನರ ಆರೋಗ್ಯ ದೃಷ್ಟಿಯಿಂದ ಹೋಟೆಲ್, ಬೀದಿ ಬದಿಯಲ್ಲಿ ತಿಂಡಿ-ತಿನಿಸುಗಳನ್ನು ಮಾರಾಟ ಮಾಡುವವರು ಬ್ರಾಂಡೆಡ್ ಎಣ್ಣೆಯನ್ನೇ ಬಳಸಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಜರುಗಿದ ಸಭೆಯಲ್ಲಿ ಆರೋಗ್ಯ ಕಾರ್ಯಕ್ರಮ/ ಯೋಜನೆಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದೇ ಇಲಾಖೆಯ ಮುಖ್ಯ ಗುರಿಯಾಗಬೇಕು. ಉತ್ತಮ ಆರೋಗ್ಯ ಸೇವೆ ನೀಡುವಲ್ಲಿ ಇಲಾಖೆಯ ಡಿ-ದರ್ಜೆ ನೌಕರರು ಸೇರಿದಂತೆ ಎಲ್ಲಾ ಅಧಿಕಾರಿ/ಸಿಬ್ಬಂದಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಆರೋಗ್ಯ ಕಾರ್ಯಕ್ರಮಗಳು ಜಿಲ್ಲಾ/ ತಾಲ್ಲೂಕು ಆಸ್ಪತ್ರೆಯಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿಯೂ ಅನುಷ್ಠಾನವಾಗಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಸಂಖ್ಯೆ, ಕಾರ್ಯ ನಿರ್ವಹಿಸುತ್ತಿರುವ ಪಿಹೆಚ್‌ಸಿಗಳ ಸಂಖ್ಯೆ ಬಗ್ಗೆ ಮಾಹಿತಿ ಪಡೆದ ಅವರು, ತಾಲ್ಲೂಕು ಆಸ್ಪತ್ರೆಗಳ ಸಮೀಪವಿರುವ ೨೪*೭ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಗತ್ಯವಿರುವ ಕಡೆಗೆ ಸ್ಥಳಾಂತರಿಸಬೇಕು. ಇದರಿಂದ ತುರ್ತು ಪರಿಸ್ಥಿತಿಗಳಲ್ಲಿ ಉತ್ತಮ ಸೇವೆ ನೀಡಬಹುದು. ಎಲ್ಲಾ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ತಿಳಿಸಿದರಲ್ಲದೆ, ತಾಲ್ಲೂಕು ಆರೋಗ್ಯಾಧಿಕಾರಿಗಳು ಮಧ್ಯಾಹ್ನ ೧ ಗಂಟೆಯ ನಂತರ ಕಚೇರಿಯಲ್ಲಿ ಇರುವುದೇ ಇಲ್ಲ ಎಂಬ ದೂರುಗಳು ಬರುತ್ತಿವೆ. ಸಾರ್ವಜನಿಕರಿಂದ ದೂರುಗಳು ಬಾರದಂತೆ ಆರೋಗ್ಯಾಧಿಕಾರಿಗಳು ಕಾರ್ಯನಿರ್ವಹಿಸಬೇಕು. ತಾಲ್ಲೂಕು ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಜನಪ್ರತಿನಿಧಿ, ಸಂಘ-ಸAಸ್ಥೆ, ಜನಸಮುದಾಯವನ್ನೊಳಪಡಿಸಿಕೊಂಡು ಸಭೆ ನಡೆಸಿ ಸಮಸ್ಯೆಗಳ ನಿವಾರಣೆಗೆ ಪ್ರಯತ್ನಿಸಬೇಕು ಎಂದು ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುವಂತೆ ಕೆಲಸ ಮಾಡಬೇಕು. ಎಲ್ಲಾ ಪಿಹೆಚ್‌ಸಿಗಳಲ್ಲಿ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಔಷಧಿಗಳ ಕೊರತೆಯಿರುವ ಪಿಹೆಚ್‌ಸಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ|| ರಜನಿ, ಉಪನಿರ್ದೇಶಕ ಡಾ|| ಧನಂಜಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಎಂ. ಚಂದ್ರಶೇಖರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ|| ಅಸ್ಗರ್ ಬೇಗ್ ಸೇರಿದಂತೆ ಸೇರಿದಂತೆ ವಿವಿಧ ತಾಲ್ಲೂಕು ಆರೋಗ್ಯಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)