ತುಮಕೂರು
ನಗರದ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಹೆಲಿರೈಡ್ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹೆಲಿಕಾಪ್ಟರ್ ಹಾರಾಟದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಹೆಲಿರೈಡ್ ಕಾರ್ಯಕ್ರಮವನ್ನು ತಕ್ಷಣವೇ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಪ್ರತಿಭಟನೆ ವೇಳೆ ಹೆಲಿಕಾಪ್ಟರ್‍ಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ತುಮಕೂರು ದಸರಾ ಉತ್ಸವದ ಅಂಗವಾಗಿ ಜಿಲ್ಲಾಡಳಿತವು ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿರೈಡ್ ಕಾರ್ಯಕ್ರಮವನ್ನು ಆಯೋಜಿಸಿದೆ. ಆದರೆ, ಸತತ 12 ದಿನಗಳ ಕಾಲ ಪ್ರತಿ 10 ನಿಮಿಷಕ್ಕೊಮ್ಮೆ ಹೆಲಿಕಾಪ್ಟರ್ ಹಾರಾಟ ನಡೆಸುವುದರಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಓದು ಹಾಗೂ ಬೋಧನಾ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂಬುದು ವಿದ್ಯಾರ್ಥಿಗಳ ಪ್ರಮುಖ ಆರೋಪವಾಗಿದೆ. ಹೆಲಿಕಾಪ್ಟರ್ ಹಾರಾಟದ ವೇಳೆ ಉಂಟಾಗುವ ಕರ್ಕಶ ಶಬ್ದದಿಂದ ತರಗತಿಗಳಲ್ಲಿ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಹೆಲಿಕಾಪ್ಟರ್‍ನಿಂದ ಉಂಟಾಗುವ ಧೂಳು ತರಗತಿ ಕೊಠಡಿಗಳ ಒಳಗೆ ಸೇರುತ್ತಿದ್ದು, ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಮಸ್ಯೆಯನ್ನು ಜಿಲ್ಲಾಡಳಿತದ ಗಮನಕ್ಕೆ ತರುವ ಉದ್ದೇಶದಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರ ಸಂಘ ಹಾಗೂ ಎಬಿವಿಪಿ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಹೆಲಿರೈಡ್ ಕಾರ್ಯಕ್ರಮವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಮನವಿ ಸಲ್ಲಿಸಿತ್ತು. ಆದರೆ, ಮನವಿಗೆ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ಎಬಿವಿಪಿ ಮುಖಂಡರು ಆರೋಪಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಿಂತ ಮನರಂಜನಾ ಕಾರ್ಯಕ್ರಮಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂಬ ಆಕ್ರೋಶವೂ ಪ್ರತಿಭಟನೆಯಲ್ಲಿ ವ್ಯಕ್ತವಾಯಿತು.
ಪ್ರತಿಭಟನೆಗೆ ಎಬಿವಿಪಿ ಜಿಲ್ಲಾ ಸಂಚಾಲಕ್ ಎಚ್.ಆರ್. ಗುರುಪ್ರಸಾದ್ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಘದ ಪ್ರತಿನಿಧಿಗಳೊಂದಿಗೆ ಜಿಲ್ಲಾಡಳಿತಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿತ್ತು. ಆದರೂ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಸಮಸ್ಯೆಯನ್ನು ಆಲಿಸಿ ಪರಿಹಾರ ಕಲ್ಪಿಸಬೇಕಾದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸದಿರುವುದು ಖಂಡನೀಯ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದ ಜಿಲ್ಲಾಡಳಿತದ ಧೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಂದುವರಿದು, ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮೀಸಲಾದ ಸ್ಥಳವಾಗಿದೆ. ಇಂತಹ ಆವರಣದಲ್ಲಿ ನಿರಂತರ ಹೆಲಿಕಾಪ್ಟರ್ ಹಾರಾಟ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯಾಗುತ್ತಿದೆ. ಹೀಗಾಗಿ ಹೆಲಿರೈಡ್ ಕಾರ್ಯಕ್ರಮವನ್ನು ತಕ್ಷಣವೇ ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ದೊರೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಮುಂದಿನ ದಿನಗಳಲ್ಲಿಯೂ ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿರೈಡ್ ಮುಂದುವರಿಸಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಬಿವಿಪಿ ರಾಜ್ಯ ಕಾರ್ಯದರ್ಶಿ ಗೋಪಿ ಮಾತನಾಡಿ, ಜಿಲ್ಲಾಡಳಿತವು ತಕ್ಷಣವೇ ಹೆಲಿರೈಡ್ ಕಾರ್ಯಕ್ರಮವನ್ನು ಸ್ಥಳಾಂತರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗಂಟೆಗಟ್ಟಲೆ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಅಹವಾಲು ಆಲಿಸಲಿಲ್ಲ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸದ ಜಿಲ್ಲಾಡಳಿತದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಹೆಲಿರೈಡ್ ಸ್ಥಳಾಂತರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್, ಜಿಲ್ಲಾ ಸಂಚಾಲಕ ಎಚ್.ಆರ್. ಗುರುಪ್ರಸಾದ್, ರಾಜ್ಯ ಕಾರ್ಯದರ್ಶಿ ಗೋಪಿ, ಜಿಲ್ಲಾ ಸಂಚಾಲಕ ಸಿದ್ದರಾಮಯ್ಯ, ಮಧುಗಿರಿ ಜಿಲ್ಲಾ ಸಂಚಾಲಕ ಲೋಕೇಶ್, ವಿದ್ಯಾರ್ಥಿನಿ ಪ್ರಮುಖ ಯಮುನಾ ಸೇರಿದಂತೆ ಕಾರ್ಯಕರ್ತರಾದ ರಂಗನಾಥ್, ಅಶೋಕ್, ಸಂಜಯ್, ಚಿರಂತ್, ಶಿವಕುಮಾರ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಹೆಲಿರೈಡ್ ಕಾರ್ಯಕ್ರಮವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಎಬಿವಿಪಿ ಪಟ್ಟು ಹಿಡಿದಿದ್ದು, ಜಿಲ್ಲಾಡಳಿತ ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

(Visited 1 times, 1 visits today)