ತುಮಕೂರು: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುμÁ್ಠನದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಅಧ್ಯಕ್ಷತೆಯಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸುತ್ತಾ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಮರಣ ಹೊಂದಿದವರ ಖಾತೆಗಳಿಗೆ ಜಮೆಯಾಗಿರುವ ಅನರ್ಹ ಮೊತ್ತವನ್ನು ನಿಯಮಾನುಸಾರ ವಾಪಸ್ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯ ಅನುμÁ್ಠನದ ಕುರಿತು, ಪಡಿತರ ಅಕ್ಕಿ ಹಾಗೂ ರಾಗಿ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ರಾಗಿಯಲ್ಲಿ ಕಲ್ಲು-ಮಣ್ಣು ಸೇರಿದಂತೆ ಇತರೆ ಯಾವುದೇ ಕಲಬೆರಕೆಗಳಿಲ್ಲದಂತೆ ಗುಣಮಟ್ಟದಿಂದ ಕೂಡಿರಬೇಕು. ಪಡಿತರವನ್ನು ಫಲಾನುಭವಿಗಳು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹಾಗೂ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಪ್ರಕರಣಗಳಿವೆಯೇ ಎಂಬುದರ ಬಗ್ಗೆಯೂ ನಿಗಾ ವಹಿಸಬೇಕು ಎಂದರು.
ನ್ಯಾಯಬೆಲೆ ಅಂಗಡಿಗಳನ್ನು ನಿಗದಿತ ಸಮಯಕ್ಕೆ ತೆರೆಯಬೇಕು. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಅಂಗಡಿಗಳ ನೋಟೀಸ್ ನೀಡಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಗತ್ಯ ದಾಖಲೆಗಳೊಂದಿಗೆ ವರದಿ ಸಲ್ಲಿಸಬೇಕು. ಪಡಿತರ ಪಡೆಯಲು ಬರುವ ಸಾರ್ವಜನಿಕರಿಗೆ ಹೆಚ್ಚಿನ ಸಮಯ ಕಾಯಿಸಬಾರದು. ನ್ಯಾಯಬೆಲೆ ಅಂಗಡಿಗಳಲ್ಲಿ ಕುಡಿಯುವ ನೀರು, ನೆರಳು ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಯುವನಿಧಿ ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಯೋಜನೆಯ ಫಲಾನುಭವಿಗಳಿಗೆ ಎಷ್ಟು ಜನರಿಗೆ ತರಬೇತಿ ನೀಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಬೇಕು. ಪದವಿ ಪೂರ್ಣಗೊಳಿಸಿರುವ ಯುವಜನರಿಗೆ ಯೋಜನೆ ಕುರಿತು ಅರಿವು ಮೂಡಿಸುವುದರ ಜತೆಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ತಾಲ್ಲೂಕು ಮಟ್ಟದ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪದವಿ ಕಾಲೇಜುಗಳಿಗೆ ಭೇಟಿ ನೀಡಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯೋಜನೆಯ ಉದ್ದೇಶ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯ ಕುರಿತು ಮಾತನಾಡಿ, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಬಸ್ಸುಗಳ ಲಭ್ಯತೆಯಲ್ಲಿ ತೊಂದರೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ತುಮಕೂರು ವಿಶ್ವವಿದ್ಯಾಲಯದಿಂದ ಬಸ್ ನಿಲ್ದಾಣಕ್ಕೆ ಸಂಚರಿಸುವ ವಿದ್ಯಾರ್ಥಿಗಳಿಗೆ ಎದುರಾಗುತ್ತಿರುವ ಸಾರಿಗೆ ಸಮಸ್ಯೆಯನ್ನು ಪರಿಹರಿಸಬೇಕು. ಬಸ್‍ಗಳ ಕೊರತೆ ಅಥವಾ ಸಂಚಾರ ಸಮಸ್ಯೆಗಳಿದ್ದಲ್ಲಿ ಸಮಗ್ರ ವರದಿ ಸಲ್ಲಿಸಿದರೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ಗೃಹಲಕ್ಷ್ಮಿ ಯೋಜನೆಯಿಂದ ದೊರೆಯುವ ಹಣವನ್ನು ಮಕ್ಕಳ ವಿದ್ಯಾಭ್ಯಾಸ, ಔಷಧೋಪಚಾರ ಹಾಗೂ ಕುಟುಂಬದ ಅಗತ್ಯಗಳಿಗೆ ಬಳಸಿಕೊಳ್ಳುತ್ತಿರುವುದಾಗಿ ತಿಳಿಸಿದರು. ಕೆಲವರು ಈ ಹಣದಿಂದ ಹೊಲಿಗೆ ಯಂತ್ರ ಖರೀದಿಸಿ ಸ್ವಯಂ ಉದ್ಯೋಗ ಆರಂಭಿಸಿರುವುದಾಗಿ, ಮತ್ತೊಬ್ಬರು ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ಸ್ವಂತ ಬ್ಯೂಟಿ ಪಾರ್ಲರ್ ಆರಂಭಿಸಿ ತಿಂಗಳಿಗೆ 30 ರಿಂದ 40 ಸಾವಿರ ರೂ. ಆದಾಯ ಗಳಿಸುತ್ತಿರುವುದಾಗಿ ತಿಳಿಸಿದರು.
ಇನ್ನು ಕೆಲವರು ದ್ವಿಚಕ್ರ ವಾಹನ ಖರೀದಿಸಿ ಮಕ್ಕಳ ವಿದ್ಯಾಭ್ಯಾಸ ಹಾಗೂ ದೈನಂದಿನ ಓಡಾಟಕ್ಕೆ ಅನುಕೂಲ ಮಾಡಿಕೊಂಡಿರುವುದಾಗಿ, ಹೈನುಗಾರಿಕೆ ಆರಂಭಿಸಿ ಹಸುಗಳನ್ನು ಸಾಕುತ್ತಿರುವುದಾಗಿ ಹಾಗೂ ಮಕ್ಕಳ ಶಿಕ್ಷಣಕ್ಕಾಗಿ ಕಂಪ್ಯೂಟರ್ ಖರೀದಿಸಿರುವುದಾಗಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಸ್ತ್ರೀಶಕ್ತಿ ಯೋಜನೆಯಡಿ ಉಳಿತಾಯ ಮಾಡಿರುವ ಹಣವನ್ನು ಕಷ್ಟದ ಸಮಯದಲ್ಲಿ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಲು ನೆರವಾಗಿವೆ ಎಂದು ಫಲಾನುಭವಿಗಳು ಅಭಿಪ್ರಾಯಪಟ್ಟರು.
ಉಳಿದ ಯೋಜನೆಯ ಫಲಾನುಭವಿಗಳು ತಮಗಾದ ಪ್ರಯೋಜನಗಳ ಬಗ್ಗೆ ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ ಬಿ.ವಿ., ಸಮಿತಿಯ ಉಪಾಧ್ಯಕ್ಷ ಹನುಮಂತಪ್ಪ, ನರಸಿಯಪ್ಪ, ಪಂಚಾಕ್ಷರಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)