ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 11ರಂದು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹಿಳೆಯರ ಸ್ವಾಭಿಮಾನದ ಸಂಕೇತವಾಗಿರುವ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ದತೆ ನಡೆಸಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಅದರಡಿಯಲ್ಲಿ ಬರುವ ನಿಗಮಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಮನ್ವಯದೊಂದಿಗೆ ಒನಕೆ ಓಬವ್ವ ಅವರ ಧೈರ್ಯ, ಶೌರ್ಯ, ಸಹಾಸ ಮತ್ತು ಸಮಯ ಪ್ರಜ್ಞೆಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ 10 ವಿದ್ಯಾರ್ಥಿಗಳನ್ನು ಗೌರವಿಸಬೇಕು. ಸಮುದಾಯದ ಅಭಿವೃದ್ದಿಯ ಜೊತೆಗೆ, ಸಮಾಜದಲ್ಲಿ ತಮ್ಮ ಸೇವೆಯ ಮೂಲಕ ಗುರುತಿಸಿಕೊಂಡಿರುವ 10 ಜನರನ್ನು ವೀರವನಿತೆ ಒನಕೆ ಓಬವ್ವ ಜಯಂತಿಯಂದು ಸನ್ಮಾನಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ನಗರದ ಟೌನ್ಹಾಲ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಬೆಳ್ಳಿಯ ಸಾರೋಟಿನಲ್ಲಿ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆಯನ್ನು ನಡೆಸಬೇಕು ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಸಮುದಾಯ ಸೇವಾ ಟ್ರಸ್ಟ್ ವತಿಯಿಂದ ಓಬವ್ವ ಕುರಿತು ನಾಟಕ ಪ್ರದರ್ಶನ ಹಾಗೂ ಕಲಾಶ್ರೀ ಡಾ: ಲಕ್ಷ್ಮಣದಾಸ್ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಉಮೇಶ್ ಚಂದ್ರ, ಪಾಲಿಕೆ ಆಯುಕ್ತೆ ಶುಭ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ ಕು. ಮಿರ್ಜಿ, ಸಮುದಾಯದ ಮುಖಂಡರಾದ ಸಿ.ಭಾನುಪ್ರಕಾಶ್, ರಂಗಯ್ಯ, ಡಾ.ಲಕ್ಷ್ಮಣದಾಸ್, ವಿಜಯಲಕ್ಷ್ಮಿ, ಪುಟ್ಟಬೋರಯ್ಯ, ಗಿರೀಶ್, ಗೋವಿಂದರಾಜು, ಚಲವಾದಿ ಶೇಖರ್, ಹೆಚ್.ಎಸ್.ಪರಮೇಶ್, ಹಾರೋಗೆರೆ ಶಂಕರ್, ಲೋಕೇಶ್, ಸಿದ್ದಲಿಂಗಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
(Visited 1 times, 1 visits today)



