ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ಮಾಲೀಕತ್ವದ ಸರ್ವೆ ನಂಬರ್‍ಗಳಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿರುವ ಜನವಸತಿದಾರರಿಗೆ ಹಕ್ಕುಪತ್ರ ವಿತರಿಸುವ ಸಂಬಂಧ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ನಗರದ ವ್ಯಾಪ್ತಿಯಲ್ಲಿ ಒಟ್ಟು 11 ಸ್ಲಂ ಪ್ರದೇಶಗಳನ್ನು ಗುರುತಿಸಲಾಗಿದ್ದು, ಸದರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸುಮಾರು 1,257 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಉದ್ದೇಶದಿಂದ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಅರ್ಹ ಕುಟುಂಬಗಳನ್ನು ಗುರುತಿಸುವುದು ಹಾಗೂ ವಸತಿ ಪ್ರದೇಶಗಳ ಭೂಮಿಯ ದಾಖಲೆಗಳನ್ನು ಪರಿಶೀಲಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ.
ಸಭೆಯಲ್ಲಿ ಸ್ಲಂ ಅಭಿವೃದ್ಧಿ ಇಲಾಖೆ, ತುಮಕೂರು ಮಹಾನಗರ ಪಾಲಿಕೆ ಹಾಗೂ ಭೂಮಾಪನ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಸರ್ವೆ ಕಾರ್ಯದ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು. ಈಗಾಗಲೇ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ನವೆಂಬರ್ 25ರೊಳಗೆ ಎಲ್ಲಾ ಸ್ಲಂ ಪ್ರದೇಶಗಳ ಸರ್ವೆ ಕಾರ್ಯವನ್ನು ಪೂರ್ಣಗೊಳಿಸಿ, ಅರ್ಹ ಫಲಾನುಭವಿಗಳನ್ನು ಅಂತಿಮವಾಗಿ ಗುರುತಿಸುವ ಮೂಲಕ ಹಕ್ಕುಪತ್ರ ವಿತರಣೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಈ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

(Visited 1 times, 1 visits today)