ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸವಾಗಿರುವ ದಾಖಲೆ ರಹಿತ ಅರ್ಹ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಗೆ ಅಗತ್ಯವಿರುವ ದಾಖಲಾತಿಗಳನ್ನು ತಕ್ಷಣ ಪಡೆಯಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸವಾಗಿರುವ ದಾಖಲೆ ರಹಿತ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಗೆ ಅಗತ್ಯವಿರುವ ದಾಖಲಾತಿಗಳ ಸಂಗ್ರಹಣೆ ಹಾಗೂ ಸರ್ವೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,389 ಕುಟುಂಬಗಳಿಂದ ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸಬೇಕಿದ್ದು, ಈವರೆಗೆ 310 ಕುಟುಂಬಗಳ ದಾಖಲಾತಿಗಳನ್ನು ಮಾತ್ರ ಪಡೆಯಲಾಗಿದೆ. ಉಳಿದ ಕುಟುಂಬಗಳಿಂದ ದಾಖಲಾತಿಗಳನ್ನು ಸಂಗ್ರಹಿಸುವುದು ಬಾಕಿ ಇರುವುದರಿಂದ, ಸಂಬಂಧಪಟ್ಟ ಕುಟುಂಬಗಳಿಂದ ವಿಳಂಬ ಮಾಡದೆ ತಮ್ಮ ವಾಸಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಗುರುತಿನ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪಡೆಯಬೇಕೆಂದು ಸೂಚನೆ ನೀಡಿದರು. ಅಲ್ಲದೆ ಸಾರ್ವಜನಿಕ ಸಂಘಟನಾ ಪ್ರತಿನಿಧಿಗಳಿಗೆ ಅಗತ್ಯ ಕ್ರಮ ವಹಿಸುವಂತೆ ಮನವಿ ಮಾಡಿದರು. ಯಾವುದೇ ಅರ್ಹ ಕುಟುಂಬವು ದಾಖಲಾತಿಗಳ ಕೊರತೆಯಿಂದ ಹಕ್ಕುಪತ್ರ ವಿತರಣೆಯಿಂದ ವಂಚಿತವಾಗಬಾರದು ಎಂದು ತಿಳಿಸಿದರು.
ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಅರ್ಹ ಕುಟುಂಬಗಳಿಗೆ ಮಾಹಿತಿ ನೀಡಿ, ಅಗತ್ಯ ದಾಖಲಾತಿಗಳನ್ನು ಸಲ್ಲಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಸರ್ವೆ ಕಾರ್ಯ ಪೂರ್ಣಗೊಂಡಿರುವ ಸ್ಲಂ ಪ್ರದೇಶಗಳಲ್ಲಿನ ಕುಟುಂಬವಾರು ಮಾಹಿತಿ ಯನ್ನು ಸಿದ್ಧಪಡಿಸಿ, ಪ್ರತಿಯೊಂದು ಕುಟುಂಬದ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ತಹಶೀಲ್ದಾರರಿಗೆ ಸಲ್ಲಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಮರಳೂರು ದಿಣ್ಣೆ, ಭಾರತಿನಗರ ಹಾಗೂ ಎಸ್.ಎನ್. ಪಾಳ್ಯ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಬಾಕಿ ಉಳಿದಿರುವುದನ್ನು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ಸದರಿ ಪ್ರದೇಶಗಳಲ್ಲಿ ಬಾಕಿ ಇರುವ ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
(Visited 1 times, 1 visits today)



