ತುಮಕೂರು: ಜಿಲ್ಲೆಯಲ್ಲಿ 2026ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ ಒಟ್ಟು 1,757 ಕರುಳುಬೇನೆ ಪ್ರಕರಣಗಳು ವರದಿಯಾಗಿದ್ದು, ಯಾವುದೇ ಮರಣ ಪ್ರಕರಣ ಸಂಭವಿಸಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಸರ್ವೇಲೆನ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸರ್ವೇಲೆನ್ಸ್ ವಿಭಾಗದ ವರದಿಯನುಸಾರ 2026ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ 92 ಡೆಂಗ್ಯೂ, 30 ಮೈಕ್ರೋಫೈಲೇರಿಯಾ, 6 ಮಲೇರಿಯಾ ಹಾಗೂ 8 ಚಿಕೂನ್‍ಗುನ್ಯಾ ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿಸಿದರು.
ಜಿಲ್ಲೆಯ ಸಾಂಕ್ರಾಮಿಕ ರೋಗಗಳ ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲಿಸಿದ ಅವರು, ಜಿಲ್ಲೆಯಲ್ಲಿ ಕರುಳುಬೇನೆ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವ ತಾಲ್ಲೂಕುಗಳಲ್ಲಿ ಚಿಕ್ಕನಾಯಕನಹಳ್ಳಿ-452, ಶಿರಾ-388, ತುಮಕೂರು-208, ಕೊರಟಗೆರೆ-183, ಗುಬ್ಬಿ-188, ಕುಣಿಗಲ್-16, ತಿಪಟೂರು-37, ತುರುವೇಕೆರೆ-54, ಪಾವಗಡ-58 ಹಾಗೂ ಮಧುಗಿರಿ-173 ಸೇರಿ ಒಟ್ಟಾರೆ 1,757 ಪ್ರಕರಣಗಳು ವರದಿಯಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ಮಾತನಾಡಿ, 2026ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ವರದಿಯಾದ 92 ಡೆಂಗ್ಯೂ ಪ್ರಕರಣಗಳ ಪೈಕಿ ತುಮಕೂರಿನಲ್ಲಿ 17, ಪಾವಗಡ-15, ಕುಣಿಗಲ್-7, ತುರುವೇಕೆರೆ-9, ತಿಪಟೂರು-7, ಚಿಕ್ಕನಾಯಕನಹಳ್ಳಿ-5, ಶಿರಾ-8, ಮಧುಗಿರಿ-7, ಕೊರಟಗೆರೆ-4 ಹಾಗೂ ಗುಬ್ಬಿ-13 ಪ್ರಕರಣಗಳು ದೃಢಪಟ್ಟಿವೆ ಎಂದು ಮಾಹಿತಿ ನೀಡಿದರು.
ಕ್ಷಯರೋಗ ನಿಯಂತ್ರಣದಡಿ ಜಿಲ್ಲೆಯಲ್ಲಿ ಪ್ರಸ್ತುತ ಮೇ ಮಾಹೆಯಿಂದ ಅಕ್ಟೋಬರ್‍ವರೆಗೆ ಒಟ್ಟು 47,757 ಕಫ ಪರೀಕ್ಷೆ ನಡೆಸಿ 1,141 ಕ್ಷಯರೋಗ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಕುಷ್ಠರೋಗ ಪ್ರಕರಣಗಳ ಪತ್ತೆ ಹಾಗೂ ಚಿಕಿತ್ಸಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೆಲವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲೆಯ ರೋಗಿಗಳ ಮಾಹಿತಿ ಆರೋಗ್ಯ ಇಲಾಖೆಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಇಂತಹ ಪ್ರಕರಣಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ಒದಗಿಸಬೇಕು. ಜಿಲ್ಲೆಯಲ್ಲಿ ಅಗತ್ಯ ಚಿಕಿತ್ಸೆ ಹಾಗೂ ಆರೋಗ್ಯ ಸೌಲಭ್ಯಗಳು ಲಭ್ಯವಿದ್ದು, ಸಾರ್ವಜನಿಕರು ಜಿಲ್ಲೆಯಲ್ಲಿಯೇ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
ಮೇ ಮಾಹೆಯಿಂದ ಅಕ್ಟೋಬರ್‍ವರೆಗೆ ವರದಿಯಾದ 795 ಹಾವು ಕಡಿತ ಪ್ರಕರಣಗಳ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. ಹಾವು ಕಡಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲಾ ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಲಾಗಿದೆ. ಸಾರ್ವಜನಿಕರಿಗೆ ಹಾವು ಕಡಿತದ ಸಂದರ್ಭದಲ್ಲಿ ತಕ್ಷಣ ಚಿಕಿತ್ಸೆ ಪಡೆಯುವ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
ರೇಬೀಸ್ ಸೋಂಕಿನಿಂದ 2026ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ 3 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಎಚ್1ಎನ್1 ಸೋಂಕಿನ ಪ್ರಕರಣಗಳ ಮೇಲೂ ನಿಗಾ ವಹಿಸಲಾಗಿದ್ದು, ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳು, ಪರೀಕ್ಷೆ, ಚಿಕಿತ್ಸೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸಾಂಕ್ರಾಮಿಕ ರೋಗಗಳ ವರದಿಯನ್ನು ಸಮರ್ಪಕವಾಗಿ ದಾಖಲಿಸಲು ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಷನ್ ಪ್ಲಾಟ್‍ಫಾರ್ಮ್ (IಊIP) ವ್ಯವಸ್ಥೆಯಡಿ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಅಸ್ಗರ್ ಬೇಗ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

(Visited 1 times, 1 visits today)