ತುಮಕೂರು: ಮಹಿಳೆಯರು ಕೇವಲ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರಾಗಿ ಉಳಿಯದೆ, ಸಮಾಜದ ಮತ್ತು ದೇಶದ ಭವಿಷ್ಯವನ್ನು ರೂಪಿಸುವ ನಿರ್ಧಾರ ಕೈಗೊಳ್ಳುವ ನಾಯಕಿಯರಾಗಿ ಬೆಳೆಯಬೇಕು. ಮಹಿಳಾ ಮೀಸಲಾತಿ ಎನ್ನುವುದು ಮಹಿಳೆಯರಿಗೆ ಅಧಿಕಾರ, ಅವಕಾಶ, ಸಮಾನತೆ ಮತ್ತು ಸ್ವಾಭಿಮಾನದ ಹಕ್ಕನ್ನು ಕಲ್ಪಿಸುವ ಮಹತ್ವದ ಸಾಮಾಜಿಕ ಬದಲಾವಣೆಯಾಗಿದೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತುಮಕೂರು ವಿವಿ ಕಲಾ ನಿಕಾಯ ಡೀನರು ಪ್ರೊ. ಕೆ. ಜಿ. ಪರಶುರಾಮ ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೆಂಗಳೂರಿ ಡಾ. ಬಿ. ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ನ. ೧೮ ಬುಧವಾರದಂದು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಹೆಚ್.ಎಸ್. ಮೋಹನ ಮಾತನಾಡಿ, ತಂತ್ರಜ್ಞಾನ ಬೆಳೆದಂತೆ ಸಮಾಜದಲ್ಲಿನ ಅಸಮಾನತೆಗಳು ತೊಲಗುವ ಬದಲು ಕೆಲವು ಸಂದರ್ಭಗಳಲ್ಲಿ ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸಮಾನತೆ ಮತ್ತು ವೈಚಾರಿಕ ಜಾಗೃತಿ ಅತ್ಯಗತ್ಯವಾಗಿದೆ ಎಂದು ಹೇಳಿದರು.
ತಮ್ಮ ವಿವೇಕ ಮತ್ತು ವಿಚಾರಶಕ್ತಿಯ ಮೂಲಕ ಸಮಾಜದ ಅಜ್ಞಾನವೆಂಬ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡಿದವರು ಡಾ. ಬಿ.ಆರ್. ಅಂಬೇಡ್ಕರ್. ವಿದ್ಯಾರ್ಥಿಗಳಲ್ಲಿ ಬರವಣಿಗೆ, ಚಿಂತನೆ ಹಾಗೂ ವೈಚಾರಿಕತೆಯನ್ನು ಬೆಳೆಸಲು ಇಂತಹ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳು ಸಹಕಾರಿಯಾಗುತ್ತವೆ. ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲದೆ, ವಿವೇಕವಂತರನ್ನಾಗಿ ರೂಪಿಸುವ ಜವಾಬ್ದಾರಿ ಪೋಷಕರು ಮತ್ತು ಸಮಾಜದ ಮೇಲಿದೆ ಎಂದು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಕೇಶವ ಅವರು ಸ್ವಾಗತಿಸಿದರು. ಪ್ರಾಧ್ಯಾಪಕರಾದ ಡಾ. ಮುನಿರಾಜು ಅವರು ವಂದಿಸಿದರು.
(Visited 1 times, 1 visits today)



