ತುಮಕೂರು: KMERC- CEPMIZ ಮೇಲುಸ್ತುವಾರಿ ಪ್ರಾಧಿಕಾರದ ಸಲಹೆಗಾರ ಸಂಜಯ್ ಎಸ್. ಬಿಜ್ಜೂರ ಅವರು ನವೆಂಬರ್ ೧೭ ಮತ್ತು ೧೮ರಂದು ತುಮಕೂರು ಜಿಲ್ಲೆಯ ವಿವಿಧ ಗಣಿ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಅನುಷ್ಠಾನ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಜಿಟಿಟಿಸಿ ವತಿಯಿಂದ ನಿರ್ಮಿಸಲಾಗಿರುವ ವಿದ್ಯಾರ್ಥಿಗಳ ಹಾಸ್ಟೆಲ್ ಹಾಗೂ ವರ್ಕ್ಶಾಪ್, ತುಮಕೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗುಬ್ಬಿ ಹಾಗೂ ನಿಟ್ಟೂರುಗಳಲ್ಲಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕಟ್ಟಡಗಳನ್ನು ಅವರು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಗುಬ್ಬಿ ಹಾಗೂ ತಿಪಟೂರು ತಾಲ್ಲೂಕುಗಳಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿರುವ ರಸ್ತೆ ಕಾಮಗಾರಿಗಳ ಪ್ರಗತಿಯನ್ನೂ ವೀಕ್ಷಿಸಿದರು.
ಅರಣ್ಯ ಇಲಾಖೆಯ ವತಿಯಿಂದ ತರಬೇನಹಳ್ಳಿ ಗ್ರಾಮದಲ್ಲಿ ಕೈಗೊಳ್ಳಲಾಗಿರುವ ಪ್ಲಾಂಟೇಶನ್ ಕಾಮಗಾರಿ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಬೈಲಪ್ಪನ ಮಠ ಹಾಗೂ ಮುದ್ದೇನಹಳ್ಳಿ ರಸ್ತೆ ಕಾಮಗಾರಿ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿರುವ ಕೈಮರ-ಬೆಳ್ಳಾರ ರಸ್ತೆ ಕಾಮಗಾರಿಗಳನ್ನು ಸಹ ಸಲಹೆಗಾರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಸಲಹೆಗಾರರ ಗಮನಕ್ಕೆ ತಂದಾಗ ಈ ಕುರಿತು ಮೂರನೇ ವ್ಯಕ್ತಿಯ ಪರಿಶೀಲನೆಗೆ ಕಳಿಸಲಾಗುವುದು ಎಂಬ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಿದರು.
ಕ್ಷೇತ್ರ ಭೇಟಿ ಸಂದರ್ಭದಲ್ಲಿ ವಿವಿಧ ಕಾಮಗಾರಿಗಳ ಗುಣಮಟ್ಟ, ಪ್ರಗತಿ, ಅನುಷ್ಠಾನದ ಹಂತ, ಲೋಗೋ ಬೋರ್ಡ್ ಇತ್ಯಾದಿ ಕುರಿತಂತೆ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತು ಅನುಷ್ಠಾನ ಇಲಾಖೆಗಳ ತಾಂತ್ರಿಕ ಅಧಿಕಾರಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ಅವರು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಕಾಮಗಾರಿಗಳ ಅನುಷ್ಠಾನದಲ್ಲಿ ಎದುರಾಗುವ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳನ್ನು ತಕ್ಷಣವೇ ಗಮನಕ್ಕೆ ತಂದು ಪರಿಹರಿಸಿಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅರಣ್ಯ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಹಿರೇಹಳ್ಳಿ ಜಿಟಿಸಿ ಪ್ರಾಂಶುಪಾಲರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)