ಪಾವಗಡ: ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ೩೩ ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಆಸ್ಪತ್ರೆಯ ವೈದ್ಯರ ನಿರ್ಲಕ್ಷ÷್ಯವೇ ಸಾವಿಗೆ ಕಾರಣ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಅರಸೀಕೆರೆ ಮೂಲದ ಸುಧಾ (೩೩) ಮೃತಪಟ್ಟ ಮಹಿಳೆ. ಸೋಮವಾರ ಬೆಳಗ್ಗೆ ಸುಮಾರು ೧೧ ಗಂಟೆಗೆ ಪಾವಗಡದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅವರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿದ್ದು, ಹೆಣ್ಣು ಮಗು ಜನಿಸಿದೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕುಟುಂಬಸ್ಥರ ಮಾಹಿತಿ ಪ್ರಕಾರ, ಹೆರಿಗೆಯಾದ ಮಧ್ಯಾಹ್ನದಿಂದಲೇ ಸುಧಾ ಅವರಿಗೆ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ಕುರಿತು ವೈದ್ಯರಿಗೆ ತಿಳಿಸಿದಾಗ ಚಿಕಿತ್ಸೆ ನೀಡಲಾಗಿತ್ತು. ಆದರೆ ರಾತ್ರಿ ವೇಳೆಗೆ ಅವರ ರಕ್ತದೊತ್ತಡದಲ್ಲಿ ಏರುಪೇರು ಕಂಡುಬAದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ.
ಅದರಂತೆ ಆಂಬುಲೆನ್ಸ್ನಲ್ಲಿ ಮಧುಗಿರಿ ಮಾರ್ಗವಾಗಿ ಬೆಂಗಳೂರಿಗೆ ಕರೆದೊಯ್ಯುವ ಸಂದರ್ಭದಲ್ಲಿ ಮಾರ್ಗಮಧ್ಯೆಯೇ ಸುಧಾ ಕೊನೆಯುಸಿರೆಳೆದಿದ್ದಾರೆ.
ಹೆರಿಗೆಯಾದ ಬಳಿಕ ಮಹಿಳೆಯ ಆರೋಗ್ಯದಲ್ಲಿ ಕಾಣಿಸಿಕೊಂಡ ಸಮಸ್ಯೆಗಳ ಬಗ್ಗೆ ವೈದ್ಯರು ಕುಟುಂಬಸ್ಥರಿಗೆ ಸಮರ್ಪಕ ಮಾಹಿತಿ ನೀಡಿದ್ದರೆ ಹಾಗೂ ಸೂಕ್ತ ಸಮಯದಲ್ಲಿ ಅಗತ್ಯ ಚಿಕಿತ್ಸೆ ಒದಗಿಸಿದ್ದರೆ ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೆರಿಗೆ ಮಾಡಿಸಿದ ವೈದ್ಯ ಬಾಬು ಅವರ ನಿರ್ಲಕ್ಷ÷್ಯದಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ.
ಮೃತದೇಹವನ್ನು ಮೊದಲು ಅರಸೀಕೆರೆಯ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿತ್ತು. ಅಲ್ಲಿ ದೂರು ನೀಡಲು ಮುಂದಾದಾಗ ಘಟನೆ ಪಾವಗಡ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಇಲ್ಲಿಯೇ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ. ಬಳಿಕ ಮೃತದೇಹವನ್ನು ಪಾವಗಡ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಳಿ ತಂದು, ವೈದ್ಯರ ನಿರ್ಲಕ್ಷ÷್ಯದ ವಿರುದ್ಧ ಪಾವಗಡ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ನಂತರ ಹೆಚ್ಚಿನ ವೈದ್ಯಕೀಯ ಪರಿಶೀಲನೆ ಹಾಗೂ ಮರಣೋತ್ತರ ಪರೀಕ್ಷೆಯ ಉದ್ದೇಶದಿಂದ ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಮೃತ ಸುಧಾ ಅವರಿಗೆ ಇದು ಎರಡನೇ ಹೆರಿಗೆಯಾಗಿದ್ದು, ಎಂಟು ವರ್ಷಗಳ ಹಿಂದೆ ಮೊದಲ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಎರಡನೇ ಹೆರಿಗೆಯಲ್ಲೂ ಹೆಣ್ಣು ಮಗು ಜನಿಸಿದ್ದು, ತಾಯಿ ಮೃತಪಟ್ಟಿರುವುದು ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ವೈದ್ಯರ ನಿರ್ಲಕ್ಷ÷್ಯದ ಆರೋಪ ಕೇಳಿಬಂದಿದ್ದು, ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆ ಹಾಗೂ ಸಂಬAಧಪಟ್ಟ ವೈದ್ಯಕೀಯ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
(Visited 1 times, 1 visits today)





