ತುಮಕೂರು: ಸಂವಿಧಾನ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅದರ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ೧೯೫೦ರ ಜನವರಿ ೨೬ರಂದು ಭಾರತದ ಸಂವಿಧಾನ ಜಾರಿಗೆ ಬಂದಿದ್ದು, ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನಗಳಲ್ಲಿ ಭಾರತೀಯ ಸಂವಿಧಾನ ಪ್ರಮುಖ ಸ್ಥಾನ ಪಡೆದಿದೆ. ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಶ್ರಮಿಸಿದ ಮಹನೀಯರನ್ನು ಸ್ಮರಿಸಬೇಕು ಎಂದರು.
ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಗೌರವಯುತವಾಗಿ ಬದುಕುವ ಹಕ್ಕನ್ನು ಕಲ್ಪಿಸಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಎಲ್ಲರಿಗೂ ಅವಕಾಶಗಳು ದೊರೆಯುತ್ತಿವೆ. ಆದರೂ ಜಾತಿ ತಾರತಮ್ಯ ಇಂದಿಗೂ ಸಮಾಜದ ಮುಂದಿರುವ ದೊಡ್ಡ ಸವಾಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದೂ ಮತ್ತೊಂದು ಗಂಭೀರ ಸಮಸ್ಯೆಯಾಗಿದೆ ಎಂದು ಹೇಳಿದರು.
ಇಂದಿನ ಯುವಕರೇ ಮುಂದಿನ ದಿನಗಳಲ್ಲಿ ಆಡಳಿತಗಾರರು, ವಿಜ್ಞಾನಿಗಳು ಹಾಗೂ ಸಮಾಜದ ಜವಾಬ್ದಾರಿಯುತ ವ್ಯಕ್ತಿಗಳಾಗಲಿದ್ದಾರೆ. ಆದ್ದರಿಂದ ಅವರಿಗೆ ಸಂವಿಧಾನದ ಅರಿವು, ಕಾನೂನಿನ ತಿಳಿವಳಿಕೆ, ಸಾಮಾಜಿಕ ಹೊಣೆಗಾರಿಕೆ ಹಾಗೂ ಮುಖ್ಯವಾಗಿ ಮಾನವೀಯ ಮೌಲ್ಯಗಳು ಇರಬೇಕು. ಐದು ವರ್ಷಕ್ಕೊಮ್ಮೆ ಮತದಾನ ಮಾಡುವುದು ಮಾತ್ರ ನಾಗರಿಕರ ಕರ್ತವ್ಯವಲ್ಲ. ಸಮಾಜದಲ್ಲಿರುವ ಸಮಸ್ಯೆಗಳನ್ನು ಅರಿತು, ಅವುಗಳ ಪರಿಹಾರಕ್ಕೆ ತಮ್ಮ ಕೊಡುಗೆ ನೀಡಬೇಕು. ಪ್ರತಿಯೊಬ್ಬರೂ ಕಾನೂನನ್ನು ಗೌರವಿಸಿ ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಆಶ್ವಿಜ ಮಾತನಾಡಿ, ಪ್ರತಿವರ್ಷ ನವೆಂಬರ್ ೨೬ರಂದು ಸಂವಿಧಾನ ದಿನದಂದು ದೇಶದ ಆಡಳಿತ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟ ಸಂವಿಧಾನವನ್ನು ಸ್ಮರಿಸಲಾಗುತ್ತದೆ. ೧೯೪೭ರ ಆಗಸ್ಟ್ ೨೯ರಂದು ನಡೆದ ಸಂವಿಧಾನ ಸಭೆಯು ಡಾ: ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಕರಡು ಸಮಿತಿಯನ್ನು ರಚಿಸಿತು. ಸುಮಾರು ೨ ವರ್ಷ ೧೧ ತಿಂಗಳು ೧೮ ದಿನಗಳ ಸುದೀರ್ಘ ಚರ್ಚೆ ಮತ್ತು ಪರಿಶ್ರಮದ ಬಳಿಕ ಸಂವಿಧಾನ ರೂಪುಗೊಂಡಿತು. ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಗಿದ್ದು, ೧೯೫೦ರ ಜನವರಿ ೨೬ರಂದು ಜಾರಿಗೆ ತರಲಾಯಿತು ಎಂದರು.
ಸAವಿಧಾನವು ಕೇವಲ ಆಡಳಿತಕ್ಕೆ ಸಂಬAಧಿಸಿದ ನಿಯಮಗಳ ದಾಖಲೆಯಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಗೌರವಯುತ ಜೀವನ, ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ಮಹತ್ವದ ದಾಖಲೆಯಾಗಿದೆ. ಸಂವಿಧಾನದ ಪ್ರಸ್ತಾವನೆಯಲ್ಲಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಅಧಿಕಾರಿಗಳು ಹಾಗೂ ಸಾರ್ವಜನಿಕ ಸೇವಕರಾಗಿ ಕಾರ್ಯನಿರ್ವಹಿಸುವಾಗ ಸಂವಿಧಾನದ ಆಶಯಗಳನ್ನು ಪಾಲಿಸುವುದು ಅತ್ಯಂತ ಮುಖ್ಯ. ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಬೇಕು. ಬಡವರು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರು ಸೇರಿದಂತೆ ದುರ್ಬಲ ವರ್ಗಗಳಿಗೆ ಸಮಾನ ಅವಕಾಶ ಮತ್ತು ನ್ಯಾಯ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿಗಳು ಪ್ರಜಾಪ್ರಭುತ್ವದ ತಳಹದಿಯಾಗಿದ್ದು, ಗ್ರಾಮಸಭೆಗಳು ಜನರ ಭಾಗವಹಿಸುವಿಕೆಗೆ ಪ್ರಮುಖ ವೇದಿಕೆಗಳಾಗಿವೆ. ಸಂವಿಧಾನವು ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ತಿಳಿಸುತ್ತದೆ. ಕಾನೂನನ್ನು ಗೌರವಿಸುವುದು, ಸಂವಿಧಾನದ ಆಶಯದಂತೆ ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವುದು, ಪರಿಸರ ಕಾಪಾಡುವುದು ಹಾಗೂ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಂವಿಧಾನ ದಿನಾಚರಣೆಯ ಪೀಠಿಕೆಯನ್ನು ಬೋಧಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ: ಹೆಚ್.ಎಲ್. ಚಂದ್ರಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಶುಭ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಈಶ್ವರಪ್ಪ ಹಾಗೂ ಸಂಜೀವಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು-ಸಿಬ್ಬಂದಿ ಹಾಗೂ ವಿವಿಧ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
(Visited 1 times, 1 visits today)





