ತುಮಕೂರು: ನಗರದ ಗಾಜಿನಮನೆಯಲ್ಲಿ ನವೆಂಬರ್ ೨೯ ಹಾಗೂ ೩೦ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವವನ್ನು ಯಾವುದೇ ಲೋಪದೋಷಗಳಿಲ್ಲದೆ ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಸಿದ್ಧತೆಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ರಾಜ್ಯದ ೩೧ ಜಿಲ್ಲೆಗಳಿಂದ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಪ್ರತಿಭೆಗಳು ಈ ಯುವಜನೋತ್ಸವದಲ್ಲಿ ಭಾಗವಹಿಸುವುದರಿಂದ ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ಲೋಪದೋಷಗಳಿಗೂ ಅವಕಾಶ ನೀಡದೆ, ಪ್ರತಿಯೊಂದು ವ್ಯವಸ್ಥೆಯನ್ನು ಪೂರ್ವಯೋಜನೆಯಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಯುವಜನೋತ್ಸವದಲ್ಲಿ ಭಾಗವಹಿಸಲು ಆಗಮಿಸುವ ಸ್ಪರ್ಧಿಗಳಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ಸಹಾಯ ಕೇಂದ್ರ(ಹೆಲ್ಪ್ ಡೆಸ್ಕ್)ಗಳನ್ನು ಸ್ಥಾಪಿಸಬೇಕು. ವಿವಿಧ ಜಿಲ್ಲೆಗಳಿಂದ ಆಗಮಿಸುವ ಸ್ಪರ್ಧಿಗಳ ಬಸ್ ಮತ್ತು ರೈಲುಗಳ ಆಗಮನದ ಸಮಯವನ್ನು ಮುಂಚಿತವಾಗಿ ಸಂಗ್ರಹಿಸಿ, ಅವರನ್ನು ಸ್ವಾಗತಿಸಿ ವಸತಿ ಹಾಗೂ ಇತರೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕಾರ್ಯಕ್ರಮದ ಪ್ರತಿಯೊಂದು ಹಂತಕ್ಕೂ ವಿವರವಾದ ಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕು ಎಂದು ಸೂಚಿಸಿದರು.
ಸ್ಪರ್ಧಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒಳಗೊಂಡ ಕಿಟ್ ವಿತರಿಸಬೇಕು. ಊಟದ ವ್ಯವಸ್ಥೆಗಾಗಿ ಕೂಪನ್ಗಳನ್ನು ನೀಡಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಊಟದ ವ್ಯವಸ್ಥೆ ಕಲ್ಪಿಸಬೇಕು. ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ವಿಶೇಷ ಗಮನಹರಿಸಬೇಕು. ಆಹಾರ ವಿತರಣಾ ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ತುರ್ತು ಪರಿಸ್ಥಿತಿ ಎದುರಿಸಲು ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ಸನ್ನದ್ಧವಾಗಿಡಬೇಕು. ಎನ್ಸಿಸಿ, ಎನ್ಎಸ್ಎಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಸ್ವಯಂಸೇವಕರಾಗಿ ನಿಯೋಜಿಸಿ, ಸ್ಪರ್ಧಿಗಳಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಹೇಳಿದರು.
ಯುವಜನೋತ್ಸವದಲ್ಲಿ ಜಾನಪದ ನೃತ್ಯ, ಜನಪದ ಗೀತೆ, ಚಿತ್ರಕಲೆ, ಬೀದಿ ನಾಟಕ ಹಾಗೂ ಕವಿತೆ ಬರೆಯುವ ಸ್ಪರ್ಧೆಗಳು ನಡೆಯಲಿವೆ. ಯುವಜನತೆಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಿರುವ ಈ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)



