ತುಮಕೂರು :

      ಜಿಲ್ಲಾಧಿಕಾರಿಗಳ ಗ್ರಾಮ ಭೇಟಿ ಮತ್ತು ಜನಸಂಪರ್ಕ ಸಭೆ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಸಣ್ಣನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಇಂದು ಚಾಲನೆ ನೀಡಿದರು.

      ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಹೋಬಳಿ ಗಡಿ ಗ್ರಾಮವಾದ ದಸೂಡಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ಭೇಟಿ ಮತ್ತು ಜನ ಸಂಪರ್ಕ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ಜಿಲ್ಲಾಧಿಕಾರಿಗಳ ಈ ವರ್ಷದ ಮೊದಲ ಗ್ರಾಮ ಭೇಟಿ ಮತ್ತು ಜನಸಂಪರ್ಕ ಸಭೆ ಕಾರ್ಯಕ್ರಮವನ್ನು ಚಿಕ್ಕನಾಯಕನಹಳ್ಳಿ ತಾಲೂಕಿನಿಂದ ಆರಂಭಿಸಲಾಗುತ್ತಿದೆ. ಈ ವ್ಯಾಪ್ತಿಯ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಲಿದ್ದಾರೆ. ಸುಲಭವಾಗಿ ಬಗೆಹರಿಯುವ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಹೆಚ್ಚಿನ ಅವಧಿ ತೆಗೆದುಕೊಳ್ಳುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲಾಗುವುದು. ಇದರಿಂದ ಜನರು ಅನಗತ್ಯವಾಗಿ ಶ್ರಮ ಪಡುವುದು ತಪ್ಪುತ್ತದೆ ಎಂದರು. ರೈತರಿಗೆ ಸಾಗುವಳಿ ಚೀಟಿಯನ್ನು ವಿತರಿಸಲಾಗುವುದು ಅಲ್ಲದೆ ಸಾಗುವಳಿ ಚೀಟಿ ನೀಡುವುದರೊಂದಿಗೆ ಖಾತೆಯನ್ನು ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದರು.

      ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ಬಗರ್ ಹುಕುಂಗಾಗಿ ಸಾಕಷ್ಟು ಹೋರಾಟ ನಡೆಸಿದ್ದೇವೆ. ಹುಳಿಯಾರು ಹೋಬಳಿ ಹೆಚ್ಚಿನ ಜನಸಂಖ್ಯೆ ಹೊಂದಿದ್ದು, ಇಲ್ಲಿ ಸಮಸ್ಯೆಗಳು ಹೆಚ್ಚಾಗಿದೆ ಆದ್ದರಿಂದ ಹುಳಿಯಾರು ಹೋಬಳಿಯ ಬಗರ್ ಹುಕುಂಗಾಗಿ ಹೆಚ್ಚುವರಿಯಾಗಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಅಲ್ಲದೇ ಇಲ್ಲಿಯೇ ಸಾಮಾಜಿಕ ಭದ್ರತೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಈ ಗ್ರಾಮಸಂಪರ್ಕ ಸಭೆ ಯಶಸ್ವಿಯಾಗಬೇಕೆಂದರೆ ಸಾರ್ವಜನಿಕರು ಸಮಾಧಾನವಾಗಿ ವರ್ತಿಸಿ ತಮ್ಮ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಎಂದರು.

     ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್ ಅವರು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಆಗಬೇಕಿರುವ ಕೆಲಸಗಳ ಕುರಿತು ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಪರಿಹಾರದ ಬಗ್ಗೆ ಸ್ಥಳದಲ್ಲಿಯೇ ಹಾಜರಿದ್ದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚೆಕ್‍ಗಳನ್ನು ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪೆಂಶನ್‍ಗಳ ಮಂಜೂರಾತಿ ಆದೇಶಗಳನ್ನು ವಿತರಿಸಿದರು.

     ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೊನ ವಂಶಿಕೃಷ್ಣ, ತಹಶೀಲ್ದಾರ್ ತೇಜಸ್ವಿನಿ, ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

      ಈ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿದರು.

(Visited 120 times, 1 visits today)