ತುಮಕೂರು:

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕೋವಿಡ್-19ರ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಕರ್ನಾಟಕ ರಾಜ್ಯ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಜರುಗಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದಿಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ಲೈಯಿಂಗ್ ಸ್ಕ್ವಾಡ್ ಹಾಗೂ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ಲೈಯಿಂಗ್ ಸ್ಕ್ವಾಡ್‍ನ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹೆಚ್ಚಿನ ಬಹಿರಂಗ ಪ್ರಚಾರ ನಡೆಯುವುದಿಲ್ಲ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳ ಬಗ್ಗೆ ದೂರು ಬಂದ ತಕ್ಷಣವೇ ಜಾಗೃತರಾಗಬೇಕು. ಈ ಬಗ್ಗೆ ಪರಿಶೀಲಿಸಬೇಕು. ಸದಾ ಪೊಲೀಸ್‍ರೊಂದಿಗೆ ಸಂಪರ್ಕದಲ್ಲಿರಬೇಕು ಎಂದರು.
ಚುನಾವಣಾ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿಗಳು ಸೆಕ್ಟರ್ ಮ್ಯಾಜಿಸ್ಟ್ರೇಟ್‍ಗಳು ಆಗಿರುತ್ತಾರೆ. ಚುನಾವಣಾ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದು ಸೇರಿದಂತೆ ಒಟ್ಟಾರೆ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಬೇಕಾಗಿರುವ ಎಲ್ಲಾ ಸಿದ್ಧತೆಗಳನ್ನು ಮಾಡಬೇಕು ಎಂದು ಅವರು ತಿಳಿಸಿದರು.
ಕೋವಿಡ್-19ರ ಹಿನ್ನೆಲೆಯಲ್ಲಿ ಮತಗಟ್ಟೆ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಕೋವಿಡ್-19 ಸೋಂಕಿತರಿಗೆ ಹಾಗೂ 99 ಡಿಗ್ರಿಗಿಂತ ಹೆಚ್ಚು ದೇಹದ ಉಷ್ಣತೆ ಇರುವವರಿಗೆ ಪ್ರತ್ಯೇಕವಾಗಿ ಮತದಾನದ ಕೊನೆಯ 1 ಗಂಟೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರು ಆಗ್ನೇಯ ಪದವೀಧರ ಕ್ಷೇತ್ರದ ಈ ಚುನಾವಣೆಯಲ್ಲಿ ಮತಪತ್ರವನ್ನು ಬಳಕೆ ಮಾಡಲಾಗುತ್ತಿದೆ. ಅಲ್ಲದೆ ಮತದಾರರು ಮತದಾನ ಮಾಡುವಾಗ ಕೈಗವಸು ನೀಡಲಾಗುವುದು ಎಂದ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಸೆಕ್ಟರ್ ಅಧಿಕಾರಿಗಳ ಹಾಗೂ ಪ್ಲೈಯಿಂಗ್ ಸ್ಕ್ವಾಡ್‍ನ ಕರ್ತವ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದರು.
ಸಭೆಯಲ್ಲಿ ಚುನಾವಣಾ ಶಾಖೆಯ ನಾಗಭೂಷಣ್ ಸೇರಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭಾಗವಹಿಸಿದ್ದರು.





