ತುಮಕೂರು :

      ಕೋವಿಡ್ ಟೆಸ್ಟ್‍ಗಳನ್ನು ಹೆಚ್ಚುಗೊಳಿಸಿ ಅಗತ್ಯ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮವಹಿಸುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ಜಿಲ್ಲೆಯಲ್ಲಿ ನಿತ್ಯ 5,400 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಗುರಿ ನಿಗಧಿಪಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 7000 ಕೋವಿಡ್ ಟೆಸ್ಟ್‍ಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿದ್ದರೆ ಅವರನ್ನು ಜಿಲ್ಲಾಸ್ಪತ್ರೆಗೆ ನಿಯೋಜಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಸೂಚಿಸಿದರು.

ಕೊರೋನಾ ಸೋಂಕಿತರ ಆರೈಕೆ ಕೇಂದ್ರಗಳಲ್ಲಿನ ಆಹಾರ ವಿತರಣೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು, ಪ್ರತಿ ಕೋವಿಡ್ ಆರೈಕೆ ಕೇಂದ್ರಕ್ಕೆ ವೈದ್ಯರು ಮತ್ತು ಪೊಲೀಸರನ್ನು ನಿಯೋಜಿಸಬೇಕು. ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಹೆಚ್ಚು ಪ್ರಕರಣಗಳಿರುವ ಗ್ರಾಮಗಳಿಗೆ ಆಯಾ ಪಿಎಚ್‍ಸಿ ವೈದ್ಯಾಧಿಕಾರಿಗಳು ಭೇಟಿ ನೀಡಿ ಸೋಂಕಿತರ ಆರೈಕೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಸೂಚಿಸಿದ ಸಚಿವರು, ಆಸ್ಪತ್ರೆಗಳ ಹಾಸಿಗೆ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಹಾಸಿಗೆಗಳನ್ನು ಮತ್ತಷ್ಟು ಹೆಚ್ಚುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಅವರಿಗೆ ನಿರ್ದೇಶಿಸಿದರು.

ಕೋವಿಡ್ ಪರೀಕ್ಷಾ ವರದಿ 24 ಗಂಟೆಯೊಳಗೆ ಬರುವಂತೆ ಕ್ರಮ ವಹಿಸಬೇಕು. ಆಯಾ ತಾಲೂಕುಗಳಗೆ ಗುರಿ ನಿಗದಿಪಡಿಸಿರುವಂತೆ ಕೋವಿಡ್ ಪರೀಕ್ಷೆ ಮಾಡಬೇಕು. ಪರೀಕ್ಷೆ ಸಂಖ್ಯೆ ಹೆಚ್ಚಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ನಿರ್ದೇಶಿಸಿದರು.

ಜಿಲ್ಲೆಯಲ್ಲೆ ಹೊಸದಾಗಿ ಸ್ಥಾಪಿಸಲಾಗುತ್ತಿರುವ ಆಕ್ಸಿಜನ್ ಘಟಕಗಳಿಂದ ಆಮ್ಲಜನಕ ಲಭ್ಯವಾಗುವಷ್ಟರಲ್ಲಿ ಆಕ್ಸಿಜನ್ ಬೆಡ್ ಗಳನ್ನು ಹೆಚ್ಚುಗೊಳಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ಲಸಿಕಾ ವಿತರಣೆ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರದಿಂದ ಪೂರೈಕೆಯಾದ ಲಸಿಕೆಯನ್ನು ಅಂದೇ ವಿತರಿಸಬೇಕು. ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಆರ್‍ಸಿ ಹೆಚ್ ಅಧಿಕಾರಿ ಡಾ. ಕೇಶವರಾಜ್ ಅವರಿಗೆ ನಿರ್ದೇಶಿಸಿದರು.

ಪಿಹೆಚ್‍ಸಿಗಳಲ್ಲಿರುವ ವೈದ್ಯರು ಪ್ರತಿದಿನ ರೆಡ್ ಝೋನ್ ಮತ್ತು ಹಾಟ್ ಸ್ಪಾಟ್ ಪ್ರದೇಶಗಳಿಗೆ ಪ್ರತಿ ದಿನ ಭೇಟಿ ನೀಡಬೇಕು ಎಂದರಲ್ಲದೆ ಕೋವಿಡ್ ಮತ್ತು ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡುವಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಂಸದ ಜಿ.ಎಸ್. ಬಸವರಾಜು, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್ ಸೇರಿದಂತೆ ಇತರರಿದ್ದರು.

(Visited 4 times, 1 visits today)