ಕೊರಟಗೆರೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಗೆಲುವಿಗೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಏಕೈಕ ಗುರಿಯಾಗಿದೆ. ಪಕ್ಷ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬರಲಿದೆ ಎಂದರು.
ಪರಮೇಶ್ವರ್ ನಾಮಪತ್ರ ಸಲ್ಲಿಕೆ
ಕೊರಟಗೆರೆ : ರಾಜ್ಯದ ಜನರ ಗಮನ ಸೆಳೆದಿರುವ ಕ್ಷೇತ್ರಗಳಲ್ಲಿ ಒಂದಾದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅವರು ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸುವ ಪ್ರಯುಕ್ತ ಬೆಳಿಗ್ಗೆ
ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಬಳಿಕ ಕೊರಟಗೆರೆಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಮತ್ತು ಕಟ್ಟೆ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ದೇವಾಲಯಗಳ ಭೇಟಿ, ವಿಶೇಷ ಪೂಜೆ ನಂತರ ಕೊರಟಗೆರೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿವರೆಗೆ ಅಪಾರ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ತೆರಳಿದ ಡಾ. ಜಿ. ಪರಮೇಶ್ವರ್ ಅವರು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ನಂದಿನಿ ಪೇಡಾದ ಪ್ಯಾಕೆಟ್ ಹಾರ ಹಾಕುವ ಮೂಲಕ ರಾಜ್ಯದಲ್ಲಿ ನಂದಿನಿ ಉಳಿಸಿ ಎಂಬ ಸಂದೇಶವನ್ನು ನೀಡಿದ್ದು ವಿಶೇಷವಾಗಿತ್ತು.
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಾಮಪತ್ರ ಸಲ್ಲಿಕೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ, ಎ.ಡಿ. ಬಲರಾಮಯ್ಯ, ಕೆಪಿಸಿಸಿ ಸದಸ್ಯ ಪ್ರಸನ್ನಕುಮಾರ್, ತುಮಕೂರು ನಗರ ಅಭ್ಯರ್ಥಿ ಇಕ್ಬಾಲ್ ಅಹಮದ್, ರಾಯಸಂದ್ರ ರವಿಕುಮಾರ್ ಮತ್ತಿತರರು ಸಾಥ್ ನೀಡಿದರು.
(Visited 1 times, 1 visits today)