ತುಮಕೂರು :
ಕಲಿತ ಶಾಲೆ ಋಣವ ತೀರಿಸೋಣ ಎಂಬ ಮಾತಿನಂತೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರದ ಜೊತೆಗೆ ಕೈಜೋಡಿಸುವ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ಪ್ರೋತ್ಸಾಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಮಂಜುನಾಥ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ “ನಾ ಕಲಿತ ಶಾಲೆಯ ತೀರಿಸುವೆ ಋಣವ-ಇದು ನನ್ನ ಜವಾಬ್ದಾರಿ” ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಹಳೆಯ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳ ಕಾರ್ಯಾಗಾರ ಹಾಗೂ ವಿಶೇಷ ಸೇವೆ ಸಲ್ಲಿಸಿದ ಸಂಘದ ಪದಾಧಿಕಾರಿಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದಿಂದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಇರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ತಿಳಿಸಿದರು.
ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಕೆ.ಸಿ ಬಸಪ್ಪ ಉಪನ್ಯಾಸ ನೀಡುತ್ತಾ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅಗತ್ಯ. ಶಿಕ್ಷಣ ಪಡೆಯುವ ಹಕ್ಕು ಮಕ್ಕಳಿಗಿದ್ದು, ಅವರನ್ನು ವಿದ್ಯಾವಂತರನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ರಾಜ್‍ಕುಮಾರ್ ಮಾತನಾಡಿ, ವಿದ್ಯಾವಂತರಾದರೆ ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬಹುದು. ಶಾಲೆಯಲ್ಲಿ ಭಾವನಾತ್ಮಕ ಕೌಶಲ್ಯದಂತಹ ಮೌಲ್ಯಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಿಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರಿ ಶಾಲೆಗಳಲ್ಲಿ ವಿವಿಧ 168 ಸರ್ಕಾರಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸಹಕಾರ ನೀಡಿರುವ ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪ್ರಸನ್ನಕುಮಾರ್, ರೇವಣ್ಣಗೌಡ, ಎಸ್.ಪಿ ಕುಮಾರಸ್ವಾಮಿ, ಆರ್. ಲಕ್ಷ್ಮಣ್, ಪಂಚಾಕ್ಷರಿ, ಹೇಮಂತ್‍ಕುಮಾರ್, ಪ್ರದೀಪ್‍ಕುಮಾರ್, ಸಿದ್ದಪ್ಪ, ಮಂಜುನಾಥ್, ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಕುಣಿಗಲ್ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ವೆಂಕಟೇಶ್, ವಸಂತ್‍ಕುಮಾರ್, ಗಂಗಾಧರಯ್ಯ, ಪವನ್‍ಕುಮಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.