ಕಂಟೈನ್‍ಮೆಂಟ್ ವಲಯದ ಪ್ರತಿಯೊಬ್ಬರನ್ನೂ ಪರೀಕ್ಷೆ ಮಾಡಿ : ಸಚಿವ

ತುಮಕೂರು:

      ಜಿಲ್ಲೆಯಲ್ಲಿರುವ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ತಪಾಸಣೆ ನಡೆಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.

      ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೋವಿಡ್ ಸಂಬಂಧಿಸಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿವೆ. ಆದುದರಿಂದ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಿ ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್. ಪ್ರಯೋಗಾಲಯವಿರುವುದರಿಂದ ಹೆಚ್ಚಿನ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುತ್ತದೆ ಎಂದರು.

      ತುಮಕೂರು ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‍ಗಳನ್ನು ಜಾಸ್ತಿ ಮಾಡಿ, ಫೀವರ್ ಕ್ಲಿನಿಕ್‍ಗೆ ಬಂದ ಪ್ರತಿಯೊಬ್ಬರಿಗೂ ಚೆಕ್ ಮಾಡಿ ಎಂದ ಅವರು, ಜಿಲ್ಲೆಯಲ್ಲಿರುವ ನಕಲಿ ವೈದ್ಯರು ಹಾಗೂ ಚೀಟಿಯಿಲ್ಲದೆ ಜ್ವರ, ನೆಗಡಿ, ಶೀತ, ಉಸಿರಾಟ ತೊಂದರೆಗೆ ಔಷಧಿಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

      ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಕ್ರಮ ಕೈಗೊಳ್ಳಿ ಎಂದು ಡಿಹೆಚ್‍ಓ ನಾಗೇಂದ್ರಪ್ಪ ಅವರಿಗೆ ಸೂಚಿಸಿದರು.

      ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರಿಗೆ ಸೂಚನೆ ನೀಡಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಸೋಂಕಿತ ಕುರಿಗಳನ್ನು ಮೇಯಿಸುತ್ತಿದ್ದು, ಆತನ 40 ಕುರಿಗಳನ್ನು ಪ್ರತ್ಯೇಕವಾಗಿರಿಸಲಾಗಿದೆ. ಈ ಕುರಿಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಿಸುವಂತೆ ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

      ಇಲ್ಲಿಯವರೆಗೂ ಕೊರೋನಾ ಕುರಿಯ ಮೂಲಕ ಹರಡಿದೆ ಎಂಬುದಕ್ಕೆ ಸಾಕ್ಷ್ಯವಿಲ್ಲ. ಆದರೂ ಕೊರೋನಾ ವಿಭಿನ್ನ ಸ್ವರೂಪದಲ್ಲಿರುವುದರಿಂದ ಕುರಿಗಳ ದ್ರವವನ್ನು ತೆಗೆದು ಪರೀಕ್ಷಿಸಲು ಸೂಚಿಸಲಾಗಿದೆ ಎಂದರು.

      ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡು ಬಂದಿಲ್ಲ. ಈ ಪೈಕಿ 8 ಮಂದಿಗೆ ಮಾತ್ರ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಸೋಂಕಿನ ಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಲು ಅವಕಾಶವಿದ್ದು, ತುಮಕೂರು ನಗರದ ಹೊರ ವಲಯದಲ್ಲಿರುವ ಟ್ರಕ್‍ಟರ್ಮಿಲ್ ಸಮೀಪದ ಕಟ್ಟಡಕ್ಕೆ ಎರಡ್ಮೂರು ದಿನಗಳಲ್ಲಿ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು, ನಿಯಂತ್ರಣ ಕ್ರಮಗಳು, ಮತ್ತಿತರ ಮಾಹಿತಿಯನ್ನು ಡಿಹೆಚ್‍ಓ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ಸಚಿವರು ಪಡೆದರು.

      ಸಭೆಯಲ್ಲಿ ಸಂಸದರಾದ ಜಿ.ಎಸ್.ಬಸವರಾಜು, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಇದ್ದರು.

(Visited 10 times, 1 visits today)

Related posts

Leave a Comment