ತುಮಕೂರು:

     ಕೊರೊನಾ ಹಾಗೂ ಜಿಲ್ಲೆಯಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಮಾದರಿಯಲ್ಲಿಯೇ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್, ಜನಸಂದಣಿಯಿಲ್ಲದಂತೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

      ಕನ್ನಡ ರಾಜ್ಯೋತ್ಸವ ಸಮಾರಂಭವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಿ ಜೂನಿಯರ್ ಕಾಲೇಜು ಮೈದಾನದವರೆಗೆ ನಡೆಯಲಿದೆ. ಇದರೊಂದಿಗೆ ಒಂದು ಕಲಾತಂಡ ಹಾಗೂ ಕೊರೋನಾ ಕುರಿತು ಅರಿವು ಮೂಡಿಸುವ ಒಂದು ಸ್ಥಬ್ಧಚಿತ್ರಕ್ಕೆ ಅವಕಾಶ ನೀಡಲಾಗುವುದು ಎಂದರು.

      ಕೊರೋನಾ ಹಾಗೂ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನವಿರುವುದಿಲ್ಲ. ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮವಿರುವುದಿಲ್ಲ ಹಾಗೂ ವಿವಿಧ ಇಲಾಖೆಗಳ ಸ್ಥಬ್ಧಚಿತ್ರಗಳೂ ಇರುವುದಿಲ್ಲ ಎಂದ ಅವರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕನ್ನಡ ರಾಜ್ಯೋತ್ಸವವನ್ನು ಅರ್ಧಪೂರ್ಣವಾಗಿ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚಿಸಿದರು.

      ಸಮಾರಂಭ ನಡೆಯುವ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳ ಕಛೇರಿ, ಭದ್ರಮ್ಮ ಚೌಲ್ಟ್ರಿ, ಶಿವಕುಮಾರ ಸ್ವಾಮೀಜಿ ಸರ್ಕಲ್ ಹಾಗೂ ಟೌನ್‍ಹಾಲ್ ಸರ್ಕಲ್‍ನಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ, ಬಾ.ಹ.ರಮಾಕುಮಾರಿ, ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆರೋಗ್ಯಾಧಿಕಾರಿ ಡಾ: ನಾಗೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 6 times, 1 visits today)