ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ : ಮಂಜುನಾಥಗೌಡ

ತುಮಕೂರು : 

      ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಿನ್ನೆ ಕರೆ ನೀಡಿದ್ದ ಕರ್ನಾಟಕ ಬಂದ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿಫಲವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು.

      ನಗರದ ಟೌನ್‍ಹಾಲ್ ವೃತ್ತದಲ್ಲಿ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಮಂಜುನಾಥಗೌಡ ನೇತೃತ್ವದಲ್ಲಿ ಜಮಾಯಿಸಿ ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳು ಕೂಗಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಒಕ್ಕೂಟದ ವತಿಯಿಂದ ಬಂದ್‍ಗೆ ಕರೆ ನೀಡಿದ್ದು, ಇದರ ಅಂಗವಾಗಿ ಪ್ರತಭಟನೆ ನಡೆಸಲಾಗುತ್ತಿದೆ ಎಂದರು.

      ಮರಾಠ ಅಭಿವೃದ್ಧಿ ನಿಗಮವನ್ನು ರಚನೆ ಮಾಡಿ 50 ಕೋಟಿ ರೂ. ಮೀಸಲಿಟ್ಟು ಕನ್ನಡಿಗರಿಗೆ ಅವಮಾನ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ನಮ್ಮ ಭಾಷೆಗೆ ಕೇವಲ 5 ಕೋಟಿ ಮೀಸಲಿಟ್ಟು, ಮರಾಠ ಅಭಿವೃದ್ಧಿಗೆ ನಿಗಮಕ್ಕೆ 50 ಕೋಟಿ ರೂ. ನೀಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.

      ವೋಟಿಗಾಗಿ ರಾಜಕಾರಣ ಮಾಡುತ್ತಾ ಜಾತಿ ಜಾತಿಗಳ ನಡುವೆ ಕಂದಕ ಸೃಷ್ಠಿಸುವ ಕೆಲಸ ಮಾಡಬಾರದು ಎಂದು ಅವರು ಹೇಳಿದರು.
ಭಾಷೆ-ಭಾಷೆಗಳು ಅನ್ಯೋನ್ಯತೆಯಿಂದ ಇರುವ ಸಂದರ್ಭದಲ್ಲಿ ರಾಜ್ಯಭಾರ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ರೀತಿ ಮಾಡುವುದು ಸರಿಯಿಲ್ಲ. ಕೂಡಲೇ ಮರಾಠ ಅಭಿವೃದ್ಧಿ ನಿಗಮವನ್ನು ಕೈ ಬಿಡಬೇಕು ಎಂದು ಅವರು ಒತ್ತಾಯಿಸಿದರು.

      ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮುಖೇನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಯುವ ಘಟಕದ ಆನಂದ್, ಬಾಲರಾಜು, ಸುನೀತಾ ಮೂರ್ತಿ, ಕುಮಾರ್, ಜ್ಞಾನೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. 

(Visited 4 times, 1 visits today)

Related posts

Leave a Comment