ತುಮಕೂರು:
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅವರು ಅಭಿಪ್ರಾಯಪಟ್ಟರು.
ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ), ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿಂದು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಮಾಧ್ಯಮಗಳು ಇಲ್ಲದಿದ್ದರೆ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಕಷ್ಟಸಾಧ್ಯವಾಗುತ್ತಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ ಅಭ್ಯುದಯಕ್ಕಾಗಿ ಹಲವಾರು ಯೋಜನೆಗಳಿಗಾಗಿ ಲಕ್ಷಾಂತರ ಕೋಟಿ ರೂ.ಗಳನ್ನು ವ್ಯಯಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಲಾಭ ತಲುಪಿದಾಗ ಮಾತ್ರ ಸರ್ಕಾರದ ಮಹತ್ತರ ಉದ್ದೇಶ ಸಾರ್ಥಕವಾಗುತ್ತದೆ ಎಂದರಲ್ಲದೆ, ರಾಜ್ಯದ ಅಭಿವೃದ್ಧಿಯಲ್ಲಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದಷ್ಟೇ ಪತ್ರಿಕಾರಂಗದ ಜವಾಬ್ದಾರಿಯು ಇರುತ್ತದೆ. ಶಾಸಕಾಂಗ ಹಾಗೂ ಕಾರ್ಯಾಂಗಗಳು ಉತ್ತಮವಾಗಿ ಕಾರ್ಯಕ್ಷಮತೆ ತೋರಿದಾಗ ಪ್ರಶಂಸಿಸುವುದು, ತಪ್ಪು ಮಾಡಿದಾಗ ಎಚ್ಚರಿಸುವುದು ಮಾಧ್ಯಮಗಳ ಹೊಣೆಯಾಗಿರುತ್ತದೆ ಎಂದು ತಿಳಿಸಿದರು.
ಮಾಧ್ಯಮಗಳು ಮೌಖಿಕ, ಬರವಣಿಗೆ, ಮುದ್ರಣ, ದೃಶ್ಯ, ಸಾಮಾಜಿಕ ಜಾಲತಾಣ ಹೀಗೆ ಹಂತಹಂತವಾಗಿ ಬೆಳೆದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸುದ್ದಿಯನ್ನು ಕ್ಷಣಾರ್ಧದಲ್ಲಿ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಇದನ್ನು ಮನಗಂಡು ಪ್ರಸಕ್ತ ವರ್ಷದಲ್ಲಿ ವಿಶ್ವವಿದ್ಯಾನಿಲಯದ ಎಂಬಿಎ ಹಾಗೂ ಎಂ.ಕಾಂ. ತರಗತಿಗಳಲ್ಲಿ ಮಾಹಿತಿ ತಂತ್ರಜ್ಞಾನ ವಿಷಯವನ್ನು ಪರಿಚಯಿಸಲಾಗಿದೆ ಎಂದರಲ್ಲದೆ ಅಭಿವೃದ್ಧಿ ಪತ್ರಿಕೋದ್ಯಮಕ್ಕಾಗಿ ವಿಶ್ವವಿದ್ಯಾನಿಲಯದಲ್ಲಿ “ಅಭಿವೃದ್ಧಿ ಕರ್ನಾಟಕ” ಎಂಬ ಯೋಜನೆಯಡಿ ಕಳೆದ ಐದಾರು ವರ್ಷಗಳಿಂದ ಏಳು ಕೋಟಿ ರೂ.ಗಳನ್ನು ಮೀಸಲಿಟ್ಟು ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹೊಸ ರೀತಿಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಹೇಗೆ ಜನರಿಗೆ ತಲುಪಿಸಬೇಕೆಂಬ ಅರಿವು ಮೂಡಿಸಲು ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಸಮಾಜದಲ್ಲಿ ಯಾವುದೇ ಸಮಸ್ಯೆ ಕಂಡುಬಂದಾಗ ಮಾಧ್ಯಮಗಳು ಎತ್ತಿಹಿಡಿಯುವ ಮೂಲಕ ಸಮಸ್ಯೆಗೆ ಸೂಕ್ತ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು. ಇದರಿಂದ ಸಮಾಜ ಸುಧಾರಣೆಯಾಗುತ್ತದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಎಂ.ಲತಾ ರವಿಕುಮಾರ್ ಮಾತನಾಡಿ, ಮಾಧ್ಯಮಗಳು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಕುಟುಂಬಗಳಿಗೂ ತಲುಪಿಸುವ ಕೆಲಸವನ್ನು ನಿರ್ವಹಿಸುತ್ತಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.
ಪಿಐಬಿ ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯದ ಹೆಚ್ಚುವರಿ ಮಹಾನಿರ್ದೇಶಕ ಎಂ.ನಾಗೇಂದ್ರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರ್ಕಾರದ ಸ್ವಚ್ಛಭಾರತ್ ಮಿಷನ್ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳ ರೂಪುರೇಷೆಗಳನ್ನು ಮಾಧ್ಯಮಗಳ ಮೂಲಕ ಬಡವರು, ರೈತರು, ಯುವಕರು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಮುಟ್ಟಿಸಲು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಸ್ವಚ್ಛಭಾರತ್ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳು ಒಂದಕ್ಕೊಂದು ಹೊಂದಿಕೊಂಡಿರುವ ಯೋಜನೆಗಳಾಗಿವೆ. ಸ್ವಚ್ಛತೆ ಇಲ್ಲದಿದ್ದರೆ ಆರೋಗ್ಯ ಅಸಾಧ್ಯ. ತ್ಯಾಜ್ಯ ನಿರ್ವಹಣೆ, ಶೌಚಾಲಯ ಬಳಕೆ ಕುರಿತಂತೆ ಜನರಲ್ಲಿ ಇನ್ನೂ ಅರಿವಿನ ಕೊರತೆ ಇದ್ದು, ಈ ನಿಟ್ಟಿನಲ್ಲಿ ಮಾಧ್ಯಮಗಳು ಜನರನ್ನು ಪರಿವರ್ತಿಸುವ ಕೆಲಸ ಮಾಡಬೇಕು. 2011ರ ಜನಗಣತಿ ಪ್ರಕಾರ ದೇಶದ ಸುಮಾರು 80ಲಕ್ಷ ಕುಟುಂಬಗಳು ಇನ್ನೂ ಶೌಚಾಲಯಗಳನ್ನು ಬಳಕೆ ಮಾಡದಿರುವುದು ಶೋಚನೀಯ ಸಂಗತಿಯಾಗಿದೆ ಎಂದರಲ್ಲದೆ, ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯು ಸಂಪೂರ್ಣವಾಗಿ ಅನುಷ್ಟಾನವಾದರೆ ವಿಶ್ವದಲ್ಲೇ ಬೃಹತ್ ಯೋಜನೆಯಾಗಿ ಹೊರಹೊಮ್ಮಲಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೂ ವಾರ್ಷಿಕ 5ಲಕ್ಷ ರೂ.ಗಳವರೆಗೂ ಆರೋಗ್ಯ ವಿಮೆ ಒದಗಿಸುವ ಮೂಲಕ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಸರ್ಕಾರದ ಇಂತಹ ಮಹತ್ತರ ಯೋಜನೆಗಳ ಬಗ್ಗೆ ಮಾಧ್ಯಮಗಳು ಚಳುವಳಿ ರೂಪದಲ್ಲಿ ಸಾರ್ವಜನಿಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೀ.ನಿ.ಪುರುಷೋತ್ತಮ್ ಮಾತನಾಡಿ, ಆಯುಷ್ಮಾನ್ ಭಾರತ್ ಯೋಜನೆಯಡಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ ಈ ಯೋಜನೆ ಕುರಿತಂತೆ ಮಾಧ್ಯಮಗಳು ಹೆಚ್ಚಿನ ಅರಿವು ಮೂಡಿಸಿರುವುದರಿಂದಲೇ ಇಂತಹ ಸಾಧನೆ ಸಾಧ್ಯವಾಗಿದ್ದು, ಸರ್ಕಾರದ ಯಾವುದೇ ಯೋಜನೆ/ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಇನ್ನಷ್ಟು ತೊಡಗಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಬಾಲರಾಜು ಅವರು ಸ್ವಚ್ಛ ಭಾರತ ಅಭಿಯಾನ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಡಾ: ಬಿ.ಟಿ.ಮುದ್ದೇಶ್ ಅವರು ಸಮೂಹ ಮಾಧ್ಯಮ ಹಾಗೂ ಅಭಿವೃದ್ಧಿ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಮಾಧ್ಯಮ ಪ್ರತಿನಿಧಿಗಳು ಹಾಜರಾಗಿ ಉಪಯುಕ್ತ ಮಾಹಿತಿ ಪಡೆದರು. ಶ್ರೀಕಾಂತ್ ಸ್ವಾಗತಿಸಿದರು. ಅಕ್ಷತಾ ವಂದಿಸಿದರು.