ತುಮಕೂರು : 

     ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.

     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಮನುಷ್ಯನ ಬದುಕಲ್ಲಿ ಯಾಂತ್ರಿಕವಾಗಿ ಜೀವನ ಮಾಡುತ್ತಿದ್ದೇವೆ. ಮನಸ್ಸನ್ನು ಹಗುರ ಮಾಡಿಕೊಂಡು ಹೊಸ ಮನುಷ್ಯರಾಗಬೇಕು. ಮನುಷ್ಯ ಮಾನಸಿಕ ಒತ್ತಡದಿಂದ ಹೊರಬರಬೇಕಾದರೆ ಕ್ರೀಡೆ, ಸಂಗೀತ, ನೃತ್ಯ, ಓದುವಂತಹ ಅಭ್ಯಾಸಗಳಲ್ಲಿ ತಲ್ಲೀನರಾಗಬೇಕು. ಮನಸ್ಸು ಸದಾ ಆರೋಗ್ಯವಾಗಿದ್ದರೆ ನಮ್ಮ ದಿನನಿತ್ಯ ಚಟುವಟಿಕೆ ಚೈತನ್ಯದಿಂದ ಕೂಡಿರುತ್ತದೆ. ಸರ್ಕಾರಿ ನೌಕರರು ಸದಾ ಉತ್ಸಕರಾಗಿ ಜನರ ಸೇವೆ ಮಾಡಬೇಕು. ಜಿಲ್ಲೆಯ ಅಭಿವೃದ್ಧಿ ಮಾಡುವ ಕೆಲಸ ನೌಕರರ ಮೇಲಿರುತ್ತದೆ. ಯಾವುದೇ ಕೆಲಸವಿರಲಿ ಸಕಾಲದಲ್ಲಿ ಮಾಡಿ ಮುಗಿಸಬೇಕು ಎಂದು ನೌಕರರಿಗೆ ಕಿವಿಮಾತು ಹೇಳಿದರು.

       ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಮಾತನಾಡಿ, ಸರ್ಕಾರಿ ನೌಕರರು ಹೆಚ್ಚಿನ ಒತ್ತಡದಿಂದ ಕೆಲಸ ಮಾಡುತ್ತಾರೆ. ನೌಕರರ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ 2 ದಿನಗಳ ಕಾಲ ಕ್ರೀಡಾಕೂಟ ಮತ್ತು ಸಾಂಸ್ಕøತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಕೆಲಸದ ಒತ್ತಡವನ್ನು ಮರೆತು ಕ್ರೀಡೆಯಲ್ಲಿ ಭಾಗವಹಿಸಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಎಚ್ಚರವಹಿಸಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಶುಭ ಆರೈಸಿದರು.

      ಕೋವಿಡ್-19 ನಿಯಂತ್ರಣದಲ್ಲಿ ತುಮಕೂರು ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ಸಂದರ್ಭದಲ್ಲಿಯೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದೇವೆ ಎಂದರು. ಅಲ್ಲದೇ ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಸರ್ಕಾರ ಸರ್ಕಾರಿ ನೌಕರರ ವೇತನ ಕಡಿತಗೊಳಿಸದೇ ವೇತನ ನೀಡಿದೆ ಎಂದು ತಿಳಿಸಿದರು.

       ಕ್ರೀಡಾಕೂಟದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಸರ್ಕಾರಿ ನೌಕರರು ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಬೇಕು ಎಂದರಲ್ಲದೇ ಮುಂದಿನ ವರ್ಷಗಳಲ್ಲಿ ಕ್ರೀಡಾಕೂಟ ಸ್ಮಾರ್ಟ್ ಸಿಟಿ ಯೋಜನೆಯಡಿ 50 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತವಾದ ಕ್ರೀಡಾಂಗಣದಲ್ಲಿ ನಡೆಯುತ್ತದೆ ಎಂದರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಾರದ ನರಸಿಂಹಮೂರ್ತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆಂಪಚೌಡಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ನಾಗರಾಜ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹರಾಜು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

 

(Visited 22 times, 1 visits today)