ತುಮಕೂರು : 

      ಜಿಲ್ಲಾದ್ಯಂತ ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.

      ಈ ಆದೇಶದನ್ವಯ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೇ ಹಬ್ಬಗಳ ಸಂದರ್ಭಗಳಲ್ಲಿ ಜಿಲ್ಲಾ ವ್ಯಾಪ್ತಿಯ ಯಾವುದೇ ಸಾರ್ವಜನಿಕ ಸ್ಥಳಗಳಾದ ಮೈದಾನ, ಉದ್ಯಾನವನ, ಮಾರುಕಟ್ಟೆ ಹಾಗೂ ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ.

      ಸಾಮಾಜಿಕ, ರಾಜಕೀಯ, ಕ್ರೀಡಾ ಚಟುವಟಿಕೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಯನ್ನು ಹಾಗೂ ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸಾಂಕೇತಿಕವಾಗಿ ಆಚರಣೆ ಮಾಡಬೇಕು. ಗುಂಪು-ಗುಂಪಾಗಿ ಪ್ರತಿಭಟನೆ, ಮುಷ್ಕರ ನಡೆಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತಪ್ಪಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸಲಾಗುವುದು.

ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು. ಈ ನಿಷೇಧಾಜ್ಞೆ ಆದೇಶದ ಮಾಹಿತಿಯನ್ನು ಕಾಣುವಂತೆ ಎಲ್ಲರಿಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲು, ಧ್ವನಿವರ್ದಕಗಳ ಮೂಲಕ ಪ್ರಚಾರ ಮಾಡಲು ಹಾಗೂ ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

(Visited 41 times, 1 visits today)