ತುಮಕೂರು : ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಆರಂಭಿಸಿ

 ತುಮಕೂರು :

ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸದ್ಯ ಸೋಂಕಿನ ಹರಡುವಿಕೆ ಮತ್ತು ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರಕಾರದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು.
ಜಿಲ್ಲೆಗೆ ನಾಲ್ಕು ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಆದೇಶಿಸಲಾಗಿತ್ತು. ಉಸ್ತುವಾರಿ ಸಚಿವರು ಹೆಚ್ಚುವರಿಯಾಗಿ ಮಧುಗಿರಿಗೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಅಲ್ಲಿಗೆ ಒಂದು ಸೇರಿ ಒಟ್ಟು ಐದು ಪ್ಲಾಂಟ್ ಕೊಡಲಾಗುವುದು. ಅಲ್ಲದೆ 25 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಆರಂಭದಲ್ಲೇ ಸೋಂಕು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಕ್ರಮ ಕೈಗೊಂಡರೆ ಹೆಚ್ಚಿನ ಅನಾಹುತ ಆಗುವುದಿಲ್ಲ. ಈಗ ಸೋಂಕು ಕಡಿಮೆ ಆಗುತ್ತಿರುವ ಲಕ್ಷಣಗಳು ಕಂಡು ಬರುತ್ತಿರುವುದು ಸಮಾಧಾನಕರ ಸಂಗತಿ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಜತೆ ಶಾಸಕರು ಮತ್ತು ಸಂಸದರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಿರುವುದರಿಂದ ನಿಯಂತ್ರಣ ಕಂಡುಬಂದಿದೆ. ಅಗತ್ಯವಿರುವ ಎಲ್ಲಾ ನೆರವು ಇಲಾಖೆಯಿಂದ ನೀಡಲಾಗುವುದು ಎಂದು ತಿಳಿಸಿದರು.
ಮೂರನೇ ಅಲೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಎರಡೂ ಮೆಡಿಕಲ್ ಕಾಲೇಜುಗಳು ಮತ್ತು ಜಿಲ್ಲಾಡಳಿತ ಮಾಡಿಕೊಳ್ಳಬೇಕು. ಆಕ್ಸಿಜನ್ ಪ್ಲಾಂಟ್, ಟೆಸ್ಟ್‍ಗಳ ಹೆಚ್ಚಿನ ಪರೀಕ್ಷೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಖಾಲಿ ಇರುವ ವೈದ್ಯರ ಹುದ್ದೆಗಳನ್ನು ನೇಮಕ ಮಾಡಲಾಗಿದೆ. ಉಳಿದ ಸಿಬ್ಬಂದಿಗಳ ನೇಮಕವೂ ಆಗಲಿದೆ. ಹೀಗಾಗಿ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮೆಡಿಕಲ್ ಕಾಲೇಜು ಶೇ.75% ಹಾಗೂ ಖಾಸಗಿ ಆಸ್ಪತ್ರೆಗಳು ಶೇ 50% ಹಾಸಿಗೆಗಳನ್ನು ನೀಡಿ ಕೋವಿಡ್ ನಿಗ್ರಹಕ್ಕೆ ಸಹಕರಿಸಬೇಕು. ಸರಕಾರ ನಿಗಧಿಗೊಳಿಸಿರುವ ದರಗಳಿಗಿಂತ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ ವಸೂಲಿ ಮಾಡುತ್ತಿರುವ ದೂರುಗಳು ಬಂದಿವೆ. ತಕ್ಷಣ ಈ ಬಗ್ಗೆ ಗಮನಹರಿಸಿ ಸರಕಾರದ ದರಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಿ.ಟಿ. ಸ್ಕ್ಯಾನ್‍ಗೆ ಸರಕಾರ ನೀಡಿರುವ ಸೂಚನೆ ಪಾಲಿಸದೆ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ.ಅಂತಹ ಸಂಸ್ಥೆಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೋವಿಡ್ ಲಸಿಕೆ ವಿಷಯದಲ್ಲಿ ಗೊಂದಲಗಳು ಮುಂದುವರಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಪ್ರಕಟಿಸಿರುವಂತೆ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದರು.
ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡಲಾಗುವ ಚಿಕಿತ್ಸೆ ವಿವರ ಪಡೆದಿದ್ದೇನೆ. ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸೋಂಕಿತರ ವಾಡ್ರ್ಗಳಲ್ಲಿ ಸಿ.ಸಿ. ಟಿವಿ ಅಳವಡಿಕೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಬೆಂಗಳೂರಿನಂತೆಯೇ ತುಮಕೂರು ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚಾಗಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮಾರ್ಗದರ್ಶನ ಮತ್ತು ನಿರ್ವಹಣೆಯಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ವಿಶೇಷವಾಗಿ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳ ಉತ್ತಮ ಕಾರ್ಯದಿಂದ ಶೇ. 47% ರಷ್ಟಿದ್ದ ಸೋಂಕಿನ ಪ್ರಮಾಣ ಶೇ.37ಕ್ಕೆ ಇಳಿಕೆಯಾಗಿದೆ ಎಂದು ಹೇಳಿದರು.

ಕೋವಿಡ್ ಜೊತೆಗೆ ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಪ್ರತಿ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್ ಗೆ ಚಿಕಿತ್ಸೆ ನೀಡುವ ಕಾರ್ಯಕ್ಕೆ ಮುಂದಾಗಿದ್ದೇವೆ. ಇದಕ್ಕೆ ಅಗತ್ಯ ಔಷಧೋಪಚಾರ ಒದಗಿಸಲು ರಾಜ್ಯ ಸರ್ಕಾರ ಬದ್ದವಾಗಿದ್ದು, ಜಿಲ್ಲೆಗೆ ಅಗತ್ಯವಾದ 24 ಕೆಎಲ್ ಆಮ್ಲಜನಕ ಪೂರೈಕೆ ಮಾಡಲಾಗುವುದು ಎಂದರು.
ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ. ಯಾರಿಗೆ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಮತ್ತು ಕೋವಿಡ್ ಸೋಂಕಿತರಾಗುತ್ತಾರೆ ಅಂತಹವರಲ್ಲಿ ಸಾಮಾನ್ಯವಾಗಿ ಕಂಡುಬರುವ ಖಾಯಿಲೆಯಾಗಿದೆ. ಯಾವುದೇ ರೀತಿಯ ಅಂಟುರೋಗವಲ್ಲ. ಜನ ಈ ರೋಗಕ್ಕೆ ಹೆದರಬಾರದು ಎಂದು ಮನವಿ ಮಾಡಿದರು.

      ಒಟ್ಟಾರೆ ಜಿಲ್ಲೆಯಲ್ಲಿ ಉತ್ತಮ ಕಾರ್ಯದಿಂದಾಗಿ ಕೋವಿಡ್ ನಿರ್ವಹಣೆ ಸಾಧ್ಯವಾಗಿದೆ. ಜಿಲ್ಲೆಯ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಕಾರ್ಯವೂ ನಿರ್ವಹಣೆಯಲ್ಲಿ ಶ್ಲಾಘನೀಯ ಎಂದರು.
ಖಾಸಗಿ ಆಂಬುಲೆನ್ಸ್ ವಾಹನದವರು ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂಬ ವಿಚಾರವಾಗಿ ದರ ನಿಗಧಿ ಮಾಡಲು ಈಗಾಲೇ ಉಪಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ಖಾಸಗಿ ಆ್ಯಂಬುಲೆನ್ಸ್ ಮಾಲೀಕರ, ಚಾಲಕರ ಸಂಘದೊಡನೆ ಚರ್ಚೆ ನಡೆಸಿ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ಅಂಬುಲೆನ್ಸ್ ವಾಹನದವರು ಅಗತ್ಯಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅದಕ್ಕಾಗಿ ಜಿಲ್ಲಾಧಿಕಾರಿ ಮತ್ತು ಆರ್.ಟಿ.ಓ. ಇಲಾಖೆಯ ಸಹಯೋಗದೊಂದಿಗೆ ವಾಹನದ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

(Visited 1 times, 1 visits today)

Related posts

Leave a Comment